ಶಾಂತಿನಗರದಲ್ಲಿ ವ್ಯಕ್ತಿ ಅಡ್ಡಗಟ್ಟಿ ದರೋಡೆ; ವಿಡಿಯೊ ವೈರಲ್‌
x
ಶಾಂತಿನಗರದಲ್ಲಿ ವ್ಯಕ್ತಿಯನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿರುವ ದೃಶ್ಯ

ಶಾಂತಿನಗರದಲ್ಲಿ ವ್ಯಕ್ತಿ ಅಡ್ಡಗಟ್ಟಿ ದರೋಡೆ; ವಿಡಿಯೊ ವೈರಲ್‌

ಬೆಂಗಳೂರಿನ ಸೆಂಟ್ರಲ್ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಕೂಡ ಈ ವಿಡಿಯೊವನ್ನು ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಹಂಚಿಕೊಂಡಿದ್ದು, ನಗರದ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸಿದ್ದಾರೆ.


ಬೆಂಗಳೂರಿನ ಶಾಂತಿನಗರದಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ.

ನ.15 ರಂದು ಮುಂಜಾನೆ 4.46 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ದರೋಡೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಬೆಂಗಳೂರಿನ ಸೆಂಟ್ರಲ್ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಕೂಡ ಈ ವಿಡಿಯೊವನ್ನು ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಹಂಚಿಕೊಂಡಿದ್ದು, ನಗರದ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಮುಂಜಾನೆ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಮೂವರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ಅಡ್ಡಗಟ್ಟಿದ್ದಾರೆ. ನಂತರ ವ್ಯಕ್ತಿಯ ಜೇಬು ತಪಾಸಣೆ ಮಾಡಿ ದರೋಡೆಗೆ ಯತ್ನಿಸಿದ್ದಾರೆ. ಸಂತ್ರಸ್ತ ವ್ಯಕ್ತಿ ಸ್ವಯಂ ರಕ್ಷಣೆಗೆ ಪ್ರಯತ್ನಿಸಿದಾಗ ಮೂವರಲ್ಲಿ ಒಬ್ಬ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಅಲ್ಲಿಂದ ಮೂವರು ಬಂದ ದಾರಿಯಲ್ಲೇ ಪರಾರಿಯಾಗಿದ್ದಾರೆ. ಮೂವರು ಅಪರಿಚಿತ ವ್ಯಕ್ತಿಗಳು ಕರವಸ್ತ್ರದಿಂದ ಗುರುತು ಮರೆಮಾಚಿರುವುದು ದೃಶ್ಯದಲ್ಲಿ ಕಂಡು ಬರುತ್ತದೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಸಾರ್ವಜನಿಕರು ಭಯ ಭೀತರಾಗಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿ ಶಿಸ್ತು ಕ್ರಮ ಜರುಗಿಸುವಂತೆ ಹಲವರು ಒತ್ತಾಯಿಸಿದ್ದಾರೆ. ‘ಕರ್ನಾಟಕದಲ್ಲಿ ಸುರಕ್ಷತೆ ಇಲ್ಲʼ, ʼಗೂಂಡಾಗಿರಿʼ ಎಂದು ಕೆಲವರು ಕಮೆಂಟ್‌ ಹಾಕಿದ್ದಾರೆ.

ಈ ಮಧ್ಯೆ, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಸಂಸದ ಪಿ.ಸಿ. ಮೋಹನ್‌ ಅವರು ವಿಡಿಯೊ ಹಂಚಿಕೊಂಡು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್‌ ಇಲಾಖೆಯನ್ನು ಆಗ್ರಹಿಸಿದ್ದಾರೆ. ಈ ಹಿಂದೆಯೂ ಪಿ.ಸಿ. ಮೋಹನ್‌ ಅವರು ತಮ್ಮ ಕ್ಷೇತ್ರದ ಮೂಲಸೌಕರ್ಯ ಹಾಗೂ ನಾಗರಿಕ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದರು.

Read More
Next Story