Mandya Violence | ಕಾನೂನು ಸುವ್ಯವಸ್ಥೆಯ ವೈಫಲ್ಯ, ಪೊಲೀಸ್‌ ಲೋಪ: ಕುಮಾರಸ್ವಾಮಿ ಕಿಡಿ
x
ಹೆಚ್‌ ಡಿ ಕುಮಾರಸ್ವಾಮಿ

Mandya Violence | ಕಾನೂನು ಸುವ್ಯವಸ್ಥೆಯ ವೈಫಲ್ಯ, ಪೊಲೀಸ್‌ ಲೋಪ: ಕುಮಾರಸ್ವಾಮಿ ಕಿಡಿ

ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿರುವುದನ್ನು ತಡೆಯಲು ವಿಫಲವಾಗಿರುವುದು ಕಾನೂನು ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಅವರು ತಮ್ಮ ʼಎಕ್ಸ್​ʼ​ನಲ್ಲಿ ಪೋಸ್ಟ್‌ ಮಾಡಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.


Click the Play button to hear this message in audio format

ಮಂಡ್ಯದ ನಾಗಮಂಗಲದಲ್ಲಿ ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಸಂಭವಿಸಿದ ಗಲಭೆಯನ್ನು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿರುವುದನ್ನು ತಡೆಯಲು ವಿಫಲವಾಗಿರುವುದು ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಸಾಕ್ಷಿ ಎಂದು ಅವರು ತಮ್ಮ ಸಾಮಾಜಿಕ ಮಾಧ್ಯಮ ʼಎಕ್ಸ್ʼ​​ನಲ್ಲಿ ಪೋಸ್ಟ್‌ ಮಾಡಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯಕ್ಕೆ ಸಾಕ್ಷಿ.

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ.

ಕರ್ನಾಟಕ ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ ಎಂದು ಕಿಡಿಕಾರಿದ್ದಾರೆ.

ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಏನಿದು ಪ್ರಕರಣ?

ಮಂಡ್ಯದ ನಾಗಮಂಗಲದಲ್ಲಿ ಬುಧವಾರ ಸಂಜೆ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಎರಡು ಕೋಮಿನ ಯುವಕರ ನಡುವೆ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಗಣೇಶ ಮೆರವಣಿಗೆ ಹೊರಟವರು ಮತ್ತೊಂದು ಕೋಮಿನ ಯುವಕರ ವಿರುದ್ಧ ಪೊಲೀಸ್‌ ಠಾಣೆ ಎದುರೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೆಲವು ಕಿಡಿಗೇಡಿಗಳು ಪಟ್ಟಣದ ಹಲವು ಅಂಗಡಿ-ಮುಂಗಟ್ಟುಗಳಿಗೆ ಬೆಂಕಿ ಹಾಕಿ ವಿಕೃತಿ ಮೆರೆದಿದ್ದರು.

ಬಳಿಕ ಪೊಲೀಸರು ಸೆಕ್ಷನ್‌ 144 ಜಾರಿ ಮಾಡಿ 50 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದರು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿ ಇದ್ದು, ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜನ ಜೀವನ ಸಹಜ ಪರಿಸ್ಥಿತಿಗೆ ಮರಳುತಿದೆ.

Read More
Next Story