Mandya Violence | ಮೇಜರ್ ಸರ್ಜರಿ: ರಾಜ್ಯ ಗುಪ್ತಚರ ಇಲಾಖೆ ಮುಖ್ಯಸ್ಥರಿಗೆ ಕೊಕ್
ಮಂಡ್ಯ ಜಿಲ್ಲೆಯ ನಾಗಮಂಗಲದ ಗಣೇಶ ಮೆರವಣಿಗೆ ಗಲಭೆಗೆ ಪೊಲೀಸ್ ಮತ್ತು ಗುಪ್ತಚರ ವೈಫಲ್ಯವೇ ಕಾರಣ ಎಂದು ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದ ಗಣೇಶ ಮೆರವಣಿಗೆ ಗಲಭೆಗೆ ಪೊಲೀಸ್ ಮತ್ತು ಗುಪ್ತಚರ ವೈಫಲ್ಯವೇ ಕಾರಣ ಎಂದು ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ.
ಪ್ರತಿಪಕ್ಷಗಳು ಗಣೇಶ ಮೆರವಣಿಗೆ ಗಲಭೆಯ ಘಟನೆಯನ್ನೇ ಮುಂದಿಟ್ಟುಕೊಂಡು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದುಬಿದ್ದಿದೆ. ಗಲಭೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಪ್ರಾಯೋಜಿಸಿರುವ ಪೂರ್ವಯೋಜಿತ ಕೃತ್ಯ ಎಂಬ ಗಂಭೀರ ಆರೋಪಗಳನ್ನು ಮಾಡಿವೆ. ಅದರಲ್ಲೂ ಮುಖ್ಯವಾಗಿ ಪೊಲೀಸ್ ಇಲಾಖೆ ಹಾಗೂ ಗುಪ್ತಚರ ಇಲಾಖೆಯ ವೈಫಲ್ಯವನ್ನು ಪ್ರತಿಪಕ್ಷಗಳು ಕಟುವಾಗಿ ಟೀಕಿಸಿವೆ.
ಈ ಟೀಕೆಗಳ ಬೆನ್ನಲ್ಲೇ ರಾಜ್ಯ ಸರ್ಕಾರ, ಗುಪ್ತಚರ ಇಲಾಖೆಗೆ ಮೇಜರ್ ಸರ್ಜರಿ ನಡೆಸಿದ್ದು, ಹಾಲಿ ಗುಪ್ತಚರ ಇಲಾಖೆಯ ಎಡಿಜಿಪಿಯಾಗಿದ್ದ ಶರತ್ಚಂದ್ರ ಅವರನ್ನು ಎತ್ತಂಗಡಿ ಮಾಡಿದೆ. ಅವರ ಸ್ಥಾನಕ್ಕೆ ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಿ ಶುಕ್ರವಾರ ಸಂಜೆ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಕೂಡ, ಸಿದ್ದರಾಮಯ್ಯ ಆಡಳಿತದಲ್ಲಿ; 2013 ರಿಂದ 18ರ ಅವಧಿಯಲ್ಲಿ ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆ ಮುಖ್ಯಸ್ಥರಾಗಿದ್ದರು. ಇದೀಗ ಮತ್ತೆ ಹೇಮಂತ್ ನಿಂಬಾಳ್ಕರ್ಗೆ ಸಿದ್ದರಾಮಯ್ಯ ಮಣೆ ಹಾಕಿದ್ದಾರೆ. ಜೊತೆಗೆ ಹಾಲಿ ಅವರು ಕಾರ್ಯನಿರ್ವಹಿಸುತ್ತಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆಯ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ ಮುಂದುವರಿಸಲಾಗಿದೆ.
ಶರತ್ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ.
ಹೇಮಂತ್ ನಿಂಬಾಳ್ಕರ್ ಅವರು 1998ನೇ ಬ್ಯಾಚಿನ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದು. 2023ರ ಜೂನ್ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ನೇಮಕಗೊಂಡಿದ್ದರು. ಈ ಹಿಂದೆ ಬೆಳಗಾವಿ ಎಸ್ಪಿ, ಬೆಂಗಳೂರಿನ ಜಂಟಿ ಆಯುಕ್ತ (ಸಿಸಿಬಿ), ಹೆಚ್ಚುವರಿ ಆಯುಕ್ತ (ಪೂರ್ವ), ಹೆಚ್ಚುವರಿ ಆಯುಕ್ತ (ಆಡಳಿತ) ಹಾಗೂ ಸಿಐಡಿ ಐಜಿಪಿ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಂಬಾಳ್ಕರ್ ನಿರ್ವಹಿಸಿದ್ದಾರೆ.
ಪತ್ನಿ ಮಾಜಿ ಕಾಂಗ್ರೆಸ್ ಶಾಸಕಿ
ಹೇಮಂತ್ ನಿಂಬಾಳ್ಕರ್ ಅವರ ಹೆಂಡತಿ ಅಂಜಲಿ ನಿಂಬಾಳ್ಕರ್ ಕಾಂಗ್ರೆಸ್ ಮಾಜಿ ಶಾಸಕಿಯಾಗಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ.