
ಸಾಂದರ್ಭಿಕ ಚಿತ್ರ
ಜುಲೈ ಮಾಸಾಂತ್ಯದವರೆಗೂ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದ್ದು, ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಬೆಂಗಳೂರು ಸೇರಿ ರಾಜ್ಯಾದ್ಯಂತ ಜುಲೈ 31 ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶನಿವಾರ ಹಾಗೂ ಭಾನುವಾರ(ಜು.26) ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದ್ದು, ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ 120 ಮಿಲಿ ಮೀಟರ್ ಮಳೆಯಾಗಿದ್ದು ಅಘನಾಶಿನಿ, ಶರಾವತಿ ಹಾಗೂ ಗುಂಡ್ಲಬಾಳು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನದಿ ಪಾತ್ರದ ಹಲವಾರು ಗ್ರಾಮಗಳು ಹಾಗೂ ಜಮೀನುಗಳಿಗೆ ನೀರು ನುಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ಶಾಲಾ-ಕಾಲೇಜುಗಳಿಗೆ ರಜೆ
ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕು, ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕು, ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದ್ದು, ಶೀತ ವಾತಾವರಣ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಈ ರಜೆ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ.