Cooperation Minister K.N. Rajanna announces retirement from electoral politics
x

ಸಹಕಾರ ಸಚಿವ ಕೆ.ಎನ್‌. ರಾಜಣ್ಣ

ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ನಿವೃತ್ತಿ ಘೋಷಣೆ

ನನಗೆ ಈಗಾಗಲೇ 75 ವರ್ಷವಾಗಿದೆ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇಲ್ಲ. ಯುವಕರಿಗೆ ಅವಕಾಶ ನೀಡಬೇಕೆಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದು ಸಹಕಾರಿ ಕ್ಷೇತ್ರ ಹಾಗೂ ಸಕ್ರಿಯ ರಾಜಕಾರಣದಲ್ಲಿ ಪಾಲ್ಗೊಳ್ಳುತ್ತೇನೆ.


ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ಯುವ ಪೀಳಿಗೆಗೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ 75 ವರ್ಷದ ರಾಜಣ್ಣ ಅವರು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ ರಾಜಣ್ಣ, ತಾವು ಸಹಕಾರಿ ಕ್ಷೇತ್ರ ಮತ್ತು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ಹಾಗೂ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ್ದಾರೆ.

ಕೆ.ಎನ್. ರಾಜಣ್ಣ ಅವರ ರಾಜಕೀಯ

ರಾಜಣ್ಣ ಅವರು 1972ರಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. ಅವರ ಸಾರ್ವಜನಿಕ ಜೀವನವು ಕಾಂಗ್ರೆಸ್‌ನ ಕ್ಯಾತ್ಸಂದ್ರ ತಾಲೂಕು ಘಟಕದ ಕಾರ್ಯದರ್ಶಿಯಾಗಿ ಪ್ರಾರಂಭಗೊಂಡಿತ್ತು. 1976ರಲ್ಲಿ ಕ್ಯಾತ್ಸಂದ್ರ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರ, 1980ರಿಂದ 1984ರ ನಡುವೆ ತುಮಕೂರು ಜಿಲ್ಲಾ ಘಟಕದ ಯುವ ಕಾಂಗ್ರೆಸ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದರು.

1998ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಯಾದ ರಾಜಣ್ಣ, 2004ರ ವಿಧಾನಸಭಾ ಚುನಾವಣೆಯಲ್ಲಿ ಬೆಳ್ಳಾವಿಯಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ನಂತರ, ಪಕ್ಷವನ್ನು ತೊರೆದು ಜಾತ್ಯತೀತ ಜನತಾದಳ ಸೇರಿ ಶಾಸಕರಾದರು. 2013ರಲ್ಲಿ ಮತ್ತೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಮಧುಗಿರಿ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ವಿಧಾನಸಭೆ ಪ್ರವೇಶಿಸಿದರು. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ. 2019ರಲ್ಲಿ ಜೆಡಿಎಸ್ ಅಭ್ಯರ್ಥಿ ವೀರಭದ್ರಪ್ಪ ಅವರ ವಿರುದ್ಧ ಸೋಲು ಅನುಭವಿಸಿದ್ದ ರಾಜಣ್ಣ, 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸಿದ್ದರಾಮಯ್ಯ ಸರ್ಕಾರದಲ್ಲಿ ಸಹಕಾರ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More
Next Story