PM Mitra Park project completed within time frame: Minister Shivanand Patil
x

ಜವಳಿ ಸಚಿವ ಶಿವಾನಂದ ಪಾಟೀಲ್‌

ಬೆಂಬಲ ಬೆಲೆಯಲ್ಲಿ ಸೋಯಾಬಿನ್‌, ಶೇಂಗಾ ಖರೀದಿಗೆ ಸಚಿವ ಶಿವಾನಂದ ಪಾಟೀಲ ಸೂಚನೆ

ಬೆಂಬಲ ಬೆಲೆಯಲ್ಲಿ ಸೋಯಾಬಿನ್‌, ಶೇಂಗಾ ಖರೀದಿಗೆ ಖರೀದಿ ಕೇಂದ್ರ ಆರಂಭಿಸಬೇಕು ಹಾಗೂ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ್‌ ಸೂಚಿಸಿದ್ದಾರೆ.


ಬೆಂಬಲ ಬೆಲೆಯಲ್ಲಿ ಸೋಯಾಬಿನ್‌ ಮತ್ತು ಶೇಂಗಾ ಖರೀದಿ ಮಾಡಲು ಖರೀದಿ ಕೇಂದ್ರ ಆರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದಪಾಟೀಲ್‌ ಸೂಚನೆ ನೀಡಿದ್ದಾರೆ.

ಸೋಯಾಬಿನ್‌ಗೆ ಕ್ವಿಂಟಲ್‌ಗೆ 5,328 ರೂ. ಮತ್ತು ಶೇಂಗಾಗೆ 7,623 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಬೀದರ್‌, ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸೋಯಾಬಿನ್‌ ಹಾಗೂ ಕೊಪ್ಪಳ, ಧಾರವಾಡ, ಹಾವೇರಿ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶೇಂಗಾ ಖರೀದಿ ಮಾಡಲಾಗುವುದು ಎಂದು ಹೇಳಿದ್ದಾರೆ.

ನಾಫೆಡ್‌, ಎನ್‌ಸಿಸಿಎಫ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವನ್ನು ಖರೀದಿಗೆ ಏಜನ್ಸಿಯಾಗಿ ನೇಮಕ ಮಾಡಲಾಗಿದೆ. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ. ಅಗತ್ಯಕ್ಕನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು, ಖರೀದಿ ಕೇಂದ್ರಗಳಲ್ಲಿ ಲೋಪಗಳಾಗದಂತೆ ಎಚ್ಚರಿಕೆ ವಹಿಸಬೇಕು ಮತ್ತು ಮಾರ್ಗಸೂಚಿ ಅನ್ವಯ ಖರೀದಿ ಮಾಡಲಾಗುತ್ತಿದೆಯೇ? ಎಂಬುದರ ಬಗ್ಗೆ ನಿರಂತರವಾಗಿ ನಿಗಾ ವಹಿಸಬೇಕು ನಿರ್ದೇಶನ ನೀಡಿದರು.

ಎಫ್‌ಎಕ್ಯೂ ಗುಣಮಟ್ಟ ಪರಿಶೀಲನೆಗೆ ಕೃಷಿ ಅಥವಾ ತೋಟಗಾರಿಕೆ ಇಲಾಖೆಯಲ್ಲಿ ಲಭ್ಯ ಇರುವ ಅಧಿಕಾರಿಗಳನ್ನು ಬಳಸಿಕೊಳ್ಳಬೇಕು. ಅಗತ್ಯವಿದ್ದರೆ ಖರೀದಿ ಸಂಸ್ಥೆಗಳು ಅಂತಹ ಅಧಿಕಾರಿಗಳಿಗೆ ತರಬೇತಿ ನೀಡಬೇಕು ಎಂದರು.

ಅನುಮತಿ ದೊರೆತಿರುವ ಶೇಂಗಾ ಸೇರಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಟ್ಟು ಎಂಟು ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗಿದೆ. ಇದುವರೆಗೆ ಉಂಡೆ ಕೊಬ್ಬರಿ, ಮಿಲ್ಲಿಂಗ್ ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೋಯಾಬಿನ್, ಸೂರ್ಯಕಾಂತಿ, ಹತ್ತಿಯನ್ನು ಖರೀದಿಸಲಾಗಿದೆ. ಬೆಲೆ ಕುಸಿತದ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ರಾಜ್ಯದ ಮನವಿಗೆ ಕೇಂದ್ರ ಪುರಸ್ಕರಿಸಿದ್ದು, ಶೇಂಗಾ ಖರೀದಿಗೆ ಕೇಂದ್ರ ಸರ್ಕಾರದಿಂದ ಎರಡು, ರಾಜ್ಯ ಸರ್ಕಾರದಿಂದ ನಾಲ್ಕು ಏಜನ್ಸಿಗಳನ್ನು ಗುರುತಿಸಲಾಗಿದೆ. ಅವಶ್ಯಕತೆಗನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲು ನಾಫೆಡ್ ಸಂಸ್ಥೆ, ಎನ್ಸಿಸಿಎಫ್ ಸಂಸ್ಥೆ ಹಾಗೂ ಖರೀದಿ ಏಜನ್ಸಿಗಳೊಂದಿಗೆ ಸಮಾಲೋಚನೆ ನಡೆಸಿ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಆರಂಭಿಸುವ ಪೂರ್ವದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ಖರೀದಿ ಕೇಂದ್ರದಿಂದ ದೂರುಗಳು ಬರಬಾರದು ಎಂದು ಎಚ್ಚರಿಕೆ ನೀಡಿದರು.

Read More
Next Story