
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಧರ್ಮಸ್ಥಳ ಕುರಿತು ಅಪಪ್ರಚಾರ ; ಸಿಎಂ ರಾಜ್ಯದ ಜನತೆಯ ಕ್ಷಮೆಯಾಚಿಸಲು ವಿಜಯೇಂದ್ರ ಆಗ್ರಹ
ಹಿಂದೂಗಳ ಪವಿತ್ರ ಕ್ಷೇತ್ರದ ಬಗೆಗಿನ ಅಪಪ್ರಚಾರದಿಂದ ಲಕ್ಷಾಂತರ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
“ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ನಿಲ್ಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪೂರ್ಣ ವಿಫಲರಾಗಿದ್ದಾರೆ. ಕೂಲೇ ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ಬಿಜೆಪಿ ನಾಯಕರೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿದ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಹಿಂದೂಗಳ ಪವಿತ್ರ ಕ್ಷೇತ್ರದ ಬಗೆಗಿನ ಅಪಪ್ರಚಾರದಿಂದ ಲಕ್ಷಾಂತರ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ. ಎಡಪಂಥೀಯರ ಒತ್ತಡಕ್ಕೆ ಮಣಿದು ಎಸ್ ಐಟಿ ತನಿಖೆ ಮಾಡಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇದರಲ್ಲಿ ಷಡ್ಯಂತ್ರ ಇದೆ ಎಂದು ಖುದ್ದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸ್ವಪಕ್ಷಿಯ ಸಚಿವ ಆರೋಪಗಳಿಗೆ ಮುಖ್ಯಮಂತ್ರಿಗಳ ಉತ್ತರ ಏನು ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಅಸಹಜ ಸಾವುಗಳ ಕುರಿತ ತನಿಖೆಯಲ್ಲಿ ಬಿಜೆಪಿ ಯಾವುದೇ ಕಾರಣಕ್ಕೂ ರಾಜಕಾರಣ ಮಾಡುವುದಿಲ್ಲ. ಆದರೆ, ಎಸ್ ಐಟಿ ತನಿಖೆಯ ವೇಳೆ ಧರ್ಮಸ್ಥಳ ಶ್ರೀಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ. ಆಧಾರವಿಲ್ಲದ ವರದಿಗಳ ಮೂಲಕ ಭಕ್ತ ಭಾವನೆಗಳಿಗೆ ಘಾಸಿ ಮಾಡಲಾಗುತ್ತಿದೆ. ಕ್ಷೇತ್ರದ ಗೌರವ ರಕ್ಷಣೆಗೆ ಬಿಜೆಪಿ ಬದ್ಧವಾಗಿದೆ ಎಂದು ಹೇಳಿದರು.
ಶನಿವಾರ ಸಂಜೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಸುಮಾರು 400 ಕಾರುಗಳಲ್ಲಿ ಕೈಗೊಂಡಿದ್ದ ಜಾಥಾವು ಧರ್ಮಸ್ಥಳ ತಲುಪಿದ್ದು, ಇಂದು ಧರ್ಮಾಧಿಕಾರಿ ಅವರೊಂದಿಗೆ ಬಿಜೆಪಿ ನಾಯಕರು ಸಮಾಲೋಚನೆ ನಡೆಸಿದರು.