
Corruption | ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲೇ ಹೆಚ್ಚು ಭ್ರಷ್ಟಾಚಾರ; ಗುತ್ತಿಗೆದಾರರ ಸಂಘ ಆರೋಪ
ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸದಿದ್ದರೆ ರಾಜ್ಯಪಾಲರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ದೂರು ನೀಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಹೊರಿಸಿ ಹೋರಾಟ ನಡೆಸಿದ ಫಲವಾಗಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ, ಈಗಿನ ಕಾಂಗ್ರೆಸ್ ಸರ್ಕಾರದಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ರಾಜ್ಯ ಗುತ್ತಿಗೆದಾರರ ಸಂಘ ಎಂದು ಆರೋಪಿಸಿದೆ.
'ಮೂರು ವರ್ಷಗಳಿಂದ ವಿವಿಧ ಇಲಾಖೆಗಳ ಕಾಮಗಾರಿಯಲ್ಲಿ ಬಾಕಿಯಿರುವ 32 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು. ಗುತ್ತಿಗೆದಾರರ ಸಂಕಷ್ಟಗಳ ಕುರಿತು ಸಾಕಷ್ಟು ಬಾರಿ ಗಮನಕ್ಕೆ ತಂದರೂ ಗಂಭೀರವಾಗಿ ಪರಿಗಣಿಸಿಲ್ಲ. ಕೂಡಲೇ ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸದಿದ್ದರೆ ರಾಜ್ಯಪಾಲರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಭ್ರಷ್ಟಾಚಾರದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಅವರು 'ರಾಜ್ಯದಲ್ಲಿ ಈ ಹಿಂದಿದ್ದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳು ಹೆಚ್ಚು ಕಮಿಷನ್ ಪಡೆಯುತ್ತಿದ್ದಾರೆ ಎಂದು ದೂರಿದ್ದಾರೆ.
ಡಿ. ಕೆಂಪಣ್ಣ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ನಡೆದ ಹೋರಾಟದ ಫಲವಾಗಿ ನಿಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ, ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ, ಭ್ರಷ್ಟಾಚಾರದ ಬಗ್ಗೆ ಗಮನಕ್ಕೆ ತಂದರೂ ಕಮಿಷನ್ ಹಾವಳಿ ನಿಂತಿಲ್ಲ ಎಂದು ಆರೋಪಿಸಿದ್ದಾರೆ.
ʼಗುತ್ತಿಗೆದಾರರು ಮೂರು ವರ್ಷಗಳಿಂದ ಸಾಲ ಮಾಡಿ ಕಾಮಗಾರಿ ಕೈಗೊಂಡಿದ್ದಾರೆ. ಈಗ ಸಾಲ ನೀಡಿರುವ ಬ್ಯಾಂಕ್‌ಗಳು ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಕಾಮಗಾರಿಗಾಗಿ ಅಡವಿಟ್ಟಿರುವ ಒಡವೆ ಬಿಡಿಸಿಕೊಳ್ಳಲು ಆಗುತ್ತಿಲ್ಲ. ಹಲವು ಗುತ್ತಿಗೆದಾರರು ಹಣ ಬಿಡುಗಡೆ ಮಾಡಿ, ಇಲ್ಲವೇ 'ದಯಾಮರಣ' ನೀಡಿ ಎಂದು ಕೇಳುವ ಪರಿಸ್ಥಿತಿ ಬಂದಿದೆ. ಕೂಡಲೇ ಹಣ ಬಾಕಿ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.
ಗುತ್ತಿಗೆದಾರರ ಸಂಘದ ಪತ್ರಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾರ್ಚ್ 3ರಂದು ಮಧ್ಯಾಹ್ನ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
ಸಭೆಯಲ್ಲಿ ರಾಜ್ಯ ಗುತ್ತಿಗೆದಾರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಸಂಘಗಳ ತಲಾ ಒಬ್ಬರು ಸಭೆಯಲ್ಲಿ ಭಾಗವಹಿಸಲಿದ್ದಾರೆ' ಎಂದು ಸಂಘದ ಅಧ್ಯಕ್ಷ ಆರ್. ಮಂಜುನಾಥ್ ತಿಳಿಸಿದ್ದಾರೆ.
ಸರ್ಕಾರದಿಂದ ಕಮಿಷನ್ ದಂಧೆ
ಬಿಜೆಪಿ ಸರ್ಕಾರದ ಮೇಲೆ ಶೇ 40 ಕಮಿಷನ್ ಕುರಿತು ಸುಳ್ಳು ಆರೋಪ ಹೊರಿಸಿ, ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಟ್ವೀಟ್ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕಮಿಷನ್ ದಾಹ ಮಿತಿ ಮೀರಿದೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ. ಜಿಎಸ್ಟಿ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದು ಅನಿವಾರ್ಯ ಎಂದು ಅಳಲು ತೋಡಿಕೊಂಡಿದ್ದಾರೆ. ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ ಎಂದು ಪ್ರಶ್ನಿಸಿದ್ದಾರೆ.
ಸುಳ್ಳು, ಅಪಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರೆಂಟಿ ಎಂದು ಲೇವಡಿ ಮಾಡಿದ್ದಾರೆ.