Muda scam: Clean chit to Chief Minister Siddaramaiah, Cabinet approves commission report
x

ಸಿಎಂ ಸಿದ್ದರಾಮಯ್ಯ

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಆಯೋಗದ ವರದಿಗೆ ಸಂಪುಟ ಅಂಗೀಕಾರ

ಮುಡಾ ಹಗರಣದ ತನಿಖೆಗಾಗಿ ರಚಿಸಲಾಗಿದ್ದ ಪಿ.ಎನ್. ದೇಸಾಯಿ ಆಯೋಗವು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.


Click the Play button to hear this message in audio format

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಏಳಿಗೆಕೆ ಕಂಟಕವಾಗಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣದಲ್ಲಿ ಅವರಿಗೆ ಕ್ಲೀನ್ ಚಿಟ್ ದೊರೆತಿದೆ. ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ನೇತೃತ್ವದ ತನಿಖಾ ಆಯೋಗವು ಸಲ್ಲಿಸಿದ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ.

ಈ ಕುರಿತು ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್, "ಮುಡಾ ಹಗರಣದ ತನಿಖೆಗಾಗಿ ರಚಿಸಲಾಗಿದ್ದ ಪಿ.ಎನ್. ದೇಸಾಯಿ ಆಯೋಗವು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆಯೋಗವು ಕೆಲವು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದು, ಅದನ್ನು ಸಂಪುಟ ಸಭೆಯಲ್ಲಿ ಒಪ್ಪಿಕೊಳ್ಳಲಾಗಿದೆ," ಎಂದು ತಿಳಿಸಿದರು.

ಈ ಹಗರಣವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಗಂಭೀರ ಆರೋಪಗಳನ್ನು ಹೊರಿಸಿತ್ತು. ಇದೀಗ ತನಿಖಾ ಆಯೋಗದ ವರದಿಯಿಂದಾಗಿ ಅವರಿಗೆ ದೊಡ್ಡ ರಾಜಕೀಯ ಮುಕ್ತಿ ಸಿಕ್ಕಂತಾಗಿದೆ.

ಏನಿದು ಮುಡಾ ಹಗರಣ?

ಮೈಸೂರು ಅಭಿವೃದ್ಧಿ ಪ್ರಾಧಿಕಾರವು ಲೇಔಟ್‌ ನಿರ್ಮಿಸಲು ಸಿಎಂ ಸಿದ್ದರಾಮಯ್ಯನವರ ಪತ್ನಿಯ ಹೆಸರಿನಲ್ಲಿ ಕೆಸರೆ ಗ್ರಾಮದಲ್ಲಿದ್ದ 3.16 ಗುಂಟೆ ಜಮೀನನ್ನು 50:50 ಮಾದರಿಯಲ್ಲಿ ಪರಿಹಾರ ನೀಡುವುದಾಗಿ ವಶಪಡಿಸಿಕೊಂಡಿತ್ತು. ಆದರೆ ಪರಿಹಾರ ನೀಡುವಾಗ ನಗರದ ಹತ್ತಿರದಲ್ಲಿ ದುಬಾರಿ ಬೆಲೆ ಬಾಳುವ 14 ಸೈಟ್‌ಗಳನ್ನು ನೀಡಿತ್ತು. ಈ ಸೈಟ್‌ಗಳನ್ನು ನೀಡಲು ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ರಾಜ್ಯಪಾಲರಿಗೆ ದೂರು ನೀಡಿದ್ದರು.

ಸದಸನದಲ್ಲೂ ಪ್ರಸ್ತಾಪ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಮುಂಗಾರು ಅಧಿವೇಶನದಲ್ಲಿ ಧರಣಿ ನಡೆಸಿದ್ದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಭಾಧ್ಯಕ್ಷರು ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದರು.

ಬಿಜೆಪಿ-ಜೆಡಿಎಸ್‌ ಮೈಸೂರು ಚಲೋ ಹೋರಾಟ

ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನ ನಾಯಕರಾದ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ, ಆರ್‌. ಅಶೋಕ್‌. ಬಿ.ವೈ. ವಿಜಯೇಂದ್ರ ಸೇರಿದಂತೆ ಸಾವಿರಾರು ಕಾರ್ಯಕರ್ತರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.

ನ್ಯಾ. ಪಿ.ಎನ್. ದೇಸಾಯಿ ಆಯೋಗ ನೇಮಕ

ಮುಡಾ ಹಗರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ನೇತೃತ್ವದಲ್ಲಿ ಆಯೋಗ ರಚಿಸಿ ಆದೇಶಿಸಿತ್ತು. ತನಿಖೆ ನಡೆಸಿದ್ದ ಆಯೋಗವು ಸಿಎಂ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಇದೀಗ ಕ್ಲೀನ್‌ ಚೀಟ್‌ ನೀಡಿದ್ದು, ಸಚಿವ ಸಂಪುಟದಲ್ಲೂ ಇದನ್ನು ಒಪ್ಪಿಕೊಳ್ಳಲಾಗಿದೆ.

ಡಿಕೆಶಿ ಬೆಂಬಲಿಗರ ಮೇಲಿನ ಪ್ರಕರಣಗಳು ವಾಪಸ್

ಇದೇ ಸಂಪುಟ ಸಭೆಯಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರ ಮೇಲಿದ್ದ ಕೆಲವು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಒಟ್ಟು 50ಕ್ಕೂ ಹೆಚ್ಚು ವಿವಿಧ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Read More
Next Story