
ನಗರ ಪಾಲಿಕೆ ನೌಕರರ ಮುಷ್ಕರ: ಇಂದು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ
ನೌಕರರ ಪ್ರಮುಖ ಬೇಡಿಕೆಗಳಲ್ಲಿ ಸರ್ಕಾರಿ ನೌಕರರಿಗೆ ನೀಡಿರುವ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಮಹಾನಗರ ಪಾಲಿಕೆಗಳ ಸಿಬ್ಬಂದಿಗೂ ವಿಸ್ತರಿಸಬೇಕು ಎಂಬುದು ಸೇರಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ ರಾಜ್ಯದ ಹತ್ತು ಮಹಾನಗರ ಪಾಲಿಕೆಗಳ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಾಲಿಕೆಗಳ ನೌಕರರು ಮತ್ತು ಸಿಬ್ಬಂದಿ ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸುತ್ತಿರುವುದೇ ಇದಕ್ಕೆ ಕಾರಣ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜೊತೆಗೆ ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ, ಕಲಬುರಗಿ, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ ಮತ್ತು ವಿಜಯಪುರ ಮಹಾನಗರ ಪಾಲಿಕೆಗಳ ನೌಕರರ ಸಂಘದ ಮುಖಂಡರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನೌಕರರು ಆಯಾ ನಗರ ಪಾಲಿಕೆಗಳ ಆವರಣದಲ್ಲಿ ಜಮಾಯಿಸಿ ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಿದ್ದಾರೆ.
ನೌಕರರ ಪ್ರಮುಖ ಬೇಡಿಕೆಗಳಲ್ಲಿ ಸರ್ಕಾರಿ ನೌಕರರಿಗೆ ನೀಡಿರುವ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಮಹಾನಗರ ಪಾಲಿಕೆಗಳ ಸಿಬ್ಬಂದಿಗೂ ವಿಸ್ತರಿಸಬೇಕು ಎಂಬುದು ಸೇರಿದೆ. ಇದಕ್ಕೆ ಆರ್ಥಿಕ ಇಲಾಖೆಯಿಂದಲೇ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ. ಜೊತೆಗೆ, ಮಹಾನಗರ ಪಾಲಿಕೆಗಳ ವೃಂದ ಮತ್ತು ನೇಮಕಾತಿ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿ ತಂದು, ಕರಡು ಅಧಿಸೂಚನೆಯನ್ನು ತಕ್ಷಣವೇ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು, ಕರ್ನಾಟಕ ಸರ್ಕಾರಿ ವಿಮಾ ಇಲಾಖೆ (ಕೆಜಿಐಡಿ) ಮತ್ತು ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್) ಸೌಲಭ್ಯಗಳನ್ನು ಮಹಾನಗರ ಪಾಲಿಕೆಗಳ ಅಧಿಕಾರಿ ಮತ್ತು ನೌಕರರಿಗೂ ಜಾರಿಗೊಳಿಸಬೇಕು ಎಂಬುದು ಅವರ ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ.
ಈ ಸಾಮೂಹಿಕ ರಜೆ ಮತ್ತು ಪ್ರತಿಭಟನೆಯಿಂದಾಗಿ ಇಂದು ಪಾಲಿಕೆಗಳಿಂದ ಸಾರ್ವಜನಿಕರಿಗೆ ಸಿಗುವ ದೈನಂದಿನ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.