ಧರ್ಮಸ್ಥಳದಲ್ಲಿ ಕೊಲೆ ಆರೋಪ: ಪ್ರತ್ಯೇಕ ತನಿಖೆ ಆರಂಭ, ಅಸ್ಥಿಪಂಜರದ ಅವಶೇಷ ಹಸ್ತಾಂತರ

ದೂರುದಾರರು ತಾವೇ ಹೊರ ತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.


ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅಪರಾಧ ಕೃತ್ಯಗಳು ನಡೆದಿವೆ ಎಂದು ವಕೀಲರ ಮೂಲಕ ಪೊಲೀಸರಿಗೆ ದೂರು ನೀಡಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹಾಜರಾಗಿದ್ದಾರೆ.

ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.), ದೂರುದಾರರ ರಕ್ಷಣೆಯ ಹಿತದೃಷ್ಟಿಯಿಂದ ಅವರ ಗುರುತನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಮನಗಂಡು, ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಯನ್ನು ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ದೂರುದಾರರು ತಾವೇ ಹೊರ ತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಈ ಅವಶೇಷಗಳನ್ನು ದೂರುದಾರರ ಪರ ವಕೀಲರು ಮತ್ತು ಪಂಚರ ಸಮ್ಮುಖದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಸ್.ಪಿ. ಸ್ಪಷ್ಟಪಡಿಸಿದ್ದಾರೆ. ಈ ಘಟನೆಯು ಧರ್ಮಸ್ಥಳದಂತಹ ಪುಣ್ಯಕ್ಷೇತ್ರದಲ್ಲಿ ಅಪರಾಧ ಕೃತ್ಯಗಳ ಆರೋಪದ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

Read More
Next Story