
Mysore MUDA Case | ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ದಂಪತಿಗೆ ಲೋಕಾಯುಕ್ತ ಪೊಲೀಸ್ ಕ್ಲೀನ್‌ಚಿಟ್
ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತರು ಅಂತಿಮ ವರದಿಯನ್ನು ಸಿದ್ಧಪಡಿಸಿದ್ದು, ಪ್ರಕರಣದ ಆರೋಪಿಗಳಾದ ಸಿಎಂ ಸಿದ್ದರಾಮಯ್ಯ, ಪತ್ನಿ ಬಿ.ಎಂ. ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಇತರರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ. ಪಾರ್ವತಿ ಹಾಗೂ ಇತರರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಲಿದ್ದಾರೆ. ಆ ಮೂಲಕ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮೂಡಾ ಪ್ರಕರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ಸಿಕ್ಕಿದೆ.
ಮುಡಾ ಪ್ರಕರಣದ ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತರು ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದು, ಈ ಸಂಬಂಧ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ “ತನಿಖೆಗೆ ಅರ್ಹವಲ್ಲದ ಪ್ರಕರಣ”ವೆಂದು ಪರಿಗಣಿಸಿ ಬಿ-ರಿಪೋರ್ಟ್ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ನೋಟಿಸ್‌ನಲ್ಲಿ ಏನಿದೆ?
ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲು ಲೋಕಾಯುಕ್ತ ಪೊಲೀಸರು ಹಲವು ಕಾರಣಗಳನ್ನು ಪ್ರಸ್ತಾಪಿಸಿ, ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದಾರೆ.
ಪ್ರಕರಣವು ಸಿವಿಲ್ ಸ್ವರೂಪದ್ದಾಗಿದ್ದು, ತನಿಖೆ ನಡೆಸಲು ತಕ್ಕುದಲ್ಲವಾಗಿದೆ. ಪ್ರಕರಣವು ಸಂಗತಿ ಅಥವಾ ಕಾನೂನಿನ ತಪ್ಪು ತಿಳಿವಳಿಕೆಯಿಂದ ಕೂಡಿದೆ. ಪ್ರಕರಣವು ಕ್ರಮ ಜರುಗಿಸಲು ತಕ್ಕುದಲ್ಲ. ಜೊತೆಗೆ ಸಾಕ್ಷ್ಯಾಧಾರಗಳ ಕೊರತೆ ಕಂಡು ಬಂದಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಲೋಕಾಯುಕ್ತ ಪೊಲೀಸರು ನೀಡಿರುವ ಅಂತಿಮ ವರದಿ ವಿರೋಧಿಸುವುದಿದ್ದರೆ ನೋಟಿಸ್ ತಲುಪಿದ ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ಎದುರು ಆಕ್ಷೇಪಣೆ ಸಲ್ಲಿಸಬಹುದು ಎಂದು ಸೂಚಿಸಿದೆ.
ನಾಲ್ವರು ಆರೋಪಿಗಳಿಗೆ ಕ್ಲೀನ್ ಚಿಟ್
ಪ್ರಕರಣದ ಆರೋಪಿಗಳಾದ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕ ಎನ್ನಲಾದ ದೇವರಾಜು ಮೇಲಿನ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ. ಆದ್ದರಿಂದ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 2016ನೇ ಸಾಲಿನಿಂದ 2024ನೇ ಸಾಲಿನವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಕಲಂ 173 (8) ಸಿ.ಆರ್.ಪಿ.ಸಿ ರೀತ್ಯಾ ಹೆಚ್ಚುವರಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ.
ಲೋಕಾಯುಕ್ತ ವಿರುದ್ಧ ಸ್ನೇಹಮಯಿ ಕೃಷ್ಣ ಆಕ್ರೋಶ
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ಚಿಟ್ ನೀಡಿರುವ ಮೈಸೂರು ಲೋಕಾಯುಕ್ತ ಪೊಲೀಸರ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ-ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ. ತನಿಖೆ ಇನ್ನೂ ಬಾಕಿ ಇರುವಾಗಲೇ ಬಿ-ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ನಾಚಿಕೆಯಾಗಬೇಕು ಎಂದು ಸ್ನೇಹಮಯಿ ಕೃಷ್ಣ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯಗೆ ಇನ್ನಷ್ಟು ನಿರಾಳ
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆಗೆ ಹೈಕೋರ್ಟ್ ವಜಾಗೊಳಿಸಿತ್ತು. ಈಗ ಲೋಕಾಯುಕ್ತ ಪೊಲೀಸರು ಕೂಡ ಪ್ರಕರಣವು ತನಿಖೆಗೆ ಅರ್ಹವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಬಿ-ರಿಪೋರ್ಟ್ ಸಲ್ಲಿಸುತ್ತಿರುವುದು ಸಿಎಂ ಸಿದ್ದರಾಮಯ್ಯ ಅವರಿಗೆ ನಿರಾಳ ತಂದಿದೆ.