Mysore MUDA Case | ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿಎಂ
x

Mysore MUDA Case | ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿಎಂ

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.


ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಕಳೆದ ತಿಂಗಳ 24 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿತ್ತು.

ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಖಮಂತ್ರಿ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಡಾ ಸಿಬ್ಬಂದಿಗೆ ಸಮನ್ಸ್‌

ಈ ನಡುವೆ ಮೈಸೂರು ಮೂಡಾ ಹಗರಣದ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಶುಕ್ರವಾರ ಮುಡಾದ ಆರು ಸಿಬ್ಬಂದಿಗೆ ಸಮನ್ಸ್ ಜಾರಿ ಮಾಡಿದ್ದು, ಬೆಂಗಳೂರಿನ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ ಅಧಿಕಾರಿಗಳು ಈಚೆಗೆ ಮೈಸೂರು ಮುಡಾ ಕಚೇರಿ ಹಾಗೂ ತಾಲ್ಲೂಕು ಕಚೇರಿಗಳ ಮೇಲೆ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದ್ದರು.

ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ಮೂಲ ಜಮೀನು ಮಾಲೀಕ ದೇವರಾಜು ಅವರ ಬೆಂಗಳೂರಿನ ಕೆಂಗೇರಿ ನಿವಾಸದಲ್ಲಿ ಶೋಧ ನಡೆಸಲಾಗಿತ್ತು. ದೇವರಾಜು ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

Read More
Next Story