Mysore MUDA Scam | ವೈಟ್ನರ್ ಅಡಿ ಅಡಗಿಸಿಟ್ಟ ಅಕ್ಷರಗಳಿಗೆ ಟಾರ್ಚ್ ಹಾಕುವುದು ಶೋಭೆ ತರಲ್ಲ: ಸಿಎಂ ವಿರುದ್ಧ ಎಚ್‌ಡಿಕೆ ವ್ಯಂಗ್ಯ
x

Mysore MUDA Scam | ವೈಟ್ನರ್ ಅಡಿ ಅಡಗಿಸಿಟ್ಟ ಅಕ್ಷರಗಳಿಗೆ ಟಾರ್ಚ್ ಹಾಕುವುದು ಶೋಭೆ ತರಲ್ಲ: ಸಿಎಂ ವಿರುದ್ಧ ಎಚ್‌ಡಿಕೆ ವ್ಯಂಗ್ಯ


ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಮುಡಾ ಬದಲಿ ನಿವೇಶನಕ್ಕೆ ಸಂಬಂಧಿಸದಂತೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಬರೆದಿರುವ ಪತ್ರದಲ್ಲಿ ವೈಟ್ನರ್‌ನಿಂದ ಕೆಲವು ಪದಗಳನ್ನು ಅಳಿಸಲಾಗಿದೆ. ಇದು ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ಇದೇ ವಿಚಾರವನ್ನು ಬಳಿಸಿಕೊಂಡು ಬಿಜೆಪಿ-ಜೆಡಿಎಸ್‌ ನಾಯಕರು ಸಿದ್ದರಾಮಯ್ಯ ಮೇಲೆ ಮುಗಿಬಿದ್ದಿದ್ದಾರೆ. ಆ ಹಿನ್ನೆಲೆಯಲ್ಲಿ ಆ ದಾಖಲೆಯ ವೈಟ್ನರ್‌ ಹಾಕಿದ ಭಾಗದಲ್ಲಿ ಇರುವ ಮೂಲ ಅಕ್ಷರಗಳನ್ನು ಟಾರ್ಚ್‌ ಹಾಕಿ ತೋರಿಸುವ ಪ್ರಯತ್ನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದರು. ಸಿಎಂ ಅವರ ಆ ಪ್ರಯತ್ನವನ್ನು ಇದೀಗ ಎಚ್‌ ಡಿಕೆ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ, ʻʻಮಾನ್ಯ ಸಿದ್ದರಾಮಯ್ಯ ಅವರೇ, ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ. ಇದರ ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ?ʼʼ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

"ನನ್ನ ಪ್ರಶ್ನೆ; ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ? ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ.. ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿʼʼ ಎಂದು ಹೇಳಿದ್ದಾರೆ.

ವೈಟ್ನರ್ ವಿಚಾರಕ್ಕೆ ಸಿಎಂ ಸ್ಪಷ್ಟನೆ

ಬಿಜೆಪಿ-ಜೆಡಿಎಸ್ ನಾಯಕರು ವೈಟ್ನರ್ ಬಳಕೆ ವಿಚಾರವನ್ನೇ ಅಸ್ತ್ರವಾಗಿಸಿಕೊಂಡಿದ್ದು, ಇದಕ್ಕೆ ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್‌ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ʻʻಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿʼʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʻʻನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ ʻದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರʼ ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆʼʼ ಎಂದು ಸ್ಪಷ್ಟನೆ ನೀಡಿದ್ದರು.

ʻʻವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದುʼʼ ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ, ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆʼʼ ಎಂದು ಸಿಎಂ ಮಾರ್ಮಿಕವಾಗಿ ಹೇಳಿದ್ದರು.

ʻʻಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆʼʼ ಎಂದು ಸಿಎಂ ಸಿದ್ದರಾಮಯ್ಯ ಮಾರ್ಮಿಕವಾಗಿ ತಿರುಗೇಟು ನೀಡಿದ್ದರು.

Read More
Next Story