Mysore MUDA Scam | ಸಿಎಂ ವಿರುದ್ಧದ ಖಾಸಗಿ ದೂರು ವಿಚಾರಣೆ ನಾಳೆ
ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕುವ ಮೂಲಕ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಸರಿ ಎಂದು ಕೋರ್ಟ್ ಹೇಳಿರುವ ಹಿನ್ನೆಲೆಯಲ್ಲಿ ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಮುಡಾ ಪ್ರಕರಣದ ವಿಚಾರಣೆ ಮತ್ತೆ ಮುಂದುವರಿಯಲಿದ್ದು, ಈಗಾಗಲೇ ಖಾಸಗಿ ದೂರಿನ ವಿಚಾರಣೆ ಬುಧವಾರಕ್ಕೆ(ಸೆ.25) ನಿಗದಿಯಾಗಿದೆ.
ಈ ಹಿನ್ನೆಲೆಯಲ್ಲಿ ದೂರುದಾರರಾದ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಾಹಂ ಹೈಕೋರ್ಟ್ ನ ತೀರ್ಪಿನ ಪ್ರತಿ ಹಿಡಿದು ಜನಪ್ರತಿನಿಧಿಗಳ ಕೋರ್ಟ್ ಮೆಟ್ಟಿಲೇರಿದ್ದು, ತನಿಖೆಗೆ ಆದೇಶ ನೀಡುವಂತೆ ಮನವಿ ಮಾಡಲು ಸಿದ್ಧತೆ ನಡೆಸಿದ್ದಾರೆ.
ಇದೇ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ಗೆ ಖಾಸಗಿ ದೂರು ದಾಖಲಿಸಿದ್ದರು. ಇನ್ನೇನು ವಿಚಾರಣೆ ನಡೆಯುವ ಸಮಯಕ್ಕೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಹೈಕೋರ್ಟ್, ಜನಪ್ರತಿನಿಧಿಗಳ ಕೋರ್ಟ್ನಲ್ಲಿ ಖಾಸಗಿ ದೂರು ವಿಚಾರಣೆಗೆ ತಡೆ ನೀಡಿತ್ತು.
ಇದೀಗ ಸ್ನೇಹಮಯಿ ಕೃಷ್ಣ ಮತ್ತು ಟಿ.ಜೆ.ಅಬ್ರಹಾಂ ಅವರು ಹೈಕೋರ್ಟ್ ಆದೇಶದ ಪ್ರತಿಯೊಂದಿಗೆ ಖಾಸಗಿ ದೂರಿನ ವಿಚಾರಣೆಗೆ ಮನವಿ ಮಾಡಲಿದ್ದು, ನಾಳೆ(ಬುಧವಾರ) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.
ಹಾಗಾಗಿ ಬುಧವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನ ವಿಚಾರಣೆ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿವೆ. ಆ ನ್ಯಾಯಾಲಯ ವಿಚಾರಣೆಯನ್ನು ಮತ್ತೆ ಮುಂದೂಡಬಹುದು ಅಥವಾ ಹೈಕೋರ್ಟ್ನ ಆದೇಶದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶ ನೀಡಬಹುದು.
ಒಂದು ವೇಳೆ ಜನಪ್ರತಿನಿಧಿಗಳ ನ್ಯಾಯಾಲಯವು ದೂರುದಾರರ ಅರ್ಜಿ ಆಧರಿಸಿ ತನಿಖೆಗೆ ಆದೇಶ ನೀಡಿದರೆ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಲಿದೆ. ಅಲ್ಲದೇ ಲೋಕಾಯುಕ್ತ ಇಲ್ಲವೇ ಎಸ್ಐಟಿಯಿಂದ ಈ ಕುರಿತು ವಿಚಾರಣೆಗೂ ಸೂಚನೆ ನೀಡಬಹುದು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ.
ಇನ್ನು ಜನಪ್ರತಿನಿಧಿಗಳ ನ್ಯಾಯಾಲಯದಿಂದ ಎಫ್ಐಆರ್ ದಾಖಲು ಮಾಡಲು ಆದೇಶ ಆದರೆ ಅಲ್ಲಿಯೂ ಸಿದ್ದರಾಮಯ್ಯ ಅವರು ಕಾನೂನು ಹೋರಾಟ ಮಾಡುವ ಸನ್ನಿವೇಶಗಳು ಎದುರಾಗಬಹುದು. ಹೀಗಾಗಿ ಜನಪ್ರತಿನಿಧಿ ನೀಡುವ ಆದೇಶದ ಮೇಲೆ ಸಿಎಂ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
ಹೈಕೋರ್ಟ್ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದ್ದರಿಂದ ಈಗಾಗಲೇ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಡ ಜೋರಾಗಿಯೇ ಇದೆ. ಒಂದು ವೇಳೆ ಜನಪ್ರತಿನಿಧಿಗಳ ಕೋರ್ಟ್ ಸಹ ತನಿಖೆಗೆ ಆದೇಶ ನೀಡಿದರೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಇದನ್ನು ಇನ್ನಷ್ಟು ತೀವ್ರಗೊಳಿಸಬಹುದು. ಹೋರಾಟವನ್ನೂ ಆರಂಭಿಸಬಹುದು.