Mysore MUDA Scam | ಕಾನೂನಾತ್ಮಕವಾಗಿ, ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸುತ್ತೇವೆ: ಸಿಎಂ ಸಿದ್ದರಾಮಯ್ಯ
ಮೈಸೂರು ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸಮರ್ಥವಾಗಿ ಎದುರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಡ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ, "ಇವತ್ತು ದೆಹಲಿಯಿಂದ ಬರುತ್ತಾರೆ ಎಂದು ಗೊತ್ತಿದೆ, ಪ್ರಾಸಿಕ್ಯೂಶನ್ ಗೆ ಅನುಮತಿ ಕೊಡ್ತೀನಿ ಅಂತ ನಿಮಗೆ ಹೇಳಿದ್ದಾರಾ?" ಎಂದು ಮರು ಪ್ರಶ್ನೆ ಮಾಡಿದರು.
ʻʻಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್ ನೊಟೀಸ್ ಹಿಂತೆಗೆದುಕೊಳ್ಳಬೇಕು. ಅದೇ ರೀತಿ ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ. ಈ ಬಗ್ಗೆ ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡೋಣʼʼ ಎಂದಿದ್ದಾರೆ.
ಮೈಸೂರು ಮುಡಾ ನಿವೇಶನ ಹಂಚಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿಯಮಬಾಹಿರವಾಗಿ ಬದಲಿ ನಿವೇಶನ ನೀಡಲಾಗಿದೆ. ಅಲ್ಲದೆ, ಭೂಸ್ವಾಧೀನವಾದ ಭೂಮಿಯನ್ನು ಡಿನೋಟಿಫೈ ಮಾಡಿ ಮತ್ತೆ ಮುಡಾ ವಶಕ್ಕೆ ಪಡೆದು ಅದಕ್ಕೆ ಬದಲಿ ನಿವೇಶನವಾಗಿ ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ 14 ನಿವೇಶನ ನೀಡಲಾಗಿದೆ. ಇದು ಅಕ್ರಮ ಮತ್ತು ಅಧಿಕಾರದ ದುರುಪಯೋಗ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಇದೇ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಇದೀಗ ಬೆಂಗಳೂರಿನಿಂದ ಮೈಸೂರಿಗೆ ಜಂಟಿ ಪಾದಯಾತ್ರೆ ನಡೆಸುತ್ತಿವೆ.
ಈ ನಡುವೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ, ಪ್ರಕರಣ ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ತಮ್ಮ ಮನವಿಯೊಂದಿಗೆ ಅವರು ಸಲ್ಲಿಸಿದ್ದ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಕಾರಣ ಕೇಳಿ ಕಳೆದ ಜು.26 ರಂದು ನೋಟಿಸ್ ನೀಡಿದ್ದರು. ಆ ಬಳಿಕ ಈ ವಿವಾದ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಅಧಿಕಾರ ಸಂಘರ್ಷದ ಸಂಗತಿಯಾಗಿ ಬದಲಾಗಿದೆ.