MUDA Scam| ಸಿಎಂ ವಿರುದ್ಧ ತನಿಖೆ ಸಂಬಂಧ ಹೈಕೋರ್ಟ್‌ನಲ್ಲಿ ಮುಂದುವರಿದ ವಿಚಾರಣೆ
ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಪ್ರಕರಣ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆಯು ಹೈಕೋರ್ಟ್‌ನಲ್ಲಿ ಸೋಮವಾರ ಅಪರಾಹ್ನ ನಡೆದಿದೆ. ನ್ಯಾಯಾಲಯದ ತೀರ್ಪು ಏನಿರಬಹುದು ಎಂಬ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಆತಂಕದ ವಾತಾವರಣವಿದ್ದು, ನ್ಯಾಯಾಲಯದ ತೀರ್ಪಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ನಡೆ ಇರಲಿದೆ ಎಂದು ವಿಶ್ಲೇಷಿಸಲಾಗಿದೆ.
ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸುತ್ತಿದ್ದಾರೆ. ಸಿದ್ದರಾಮಯ್ಯ ಪರವಾಗಿ ಶತಾಭೀಷ್ ಶಿವಣ್ಣ ಹಾಜರಾಗಿದ್ದಾರೆ. ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಸಂಬಂಧ ಇದುವರೆಗೆ ನಾಲ್ಕು ಬಾರಿ ವಿಚಾರಣೆ ನಡೆದಿದೆ.
ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಮತ್ತು ರವಿವರ್ಮಕುಮಾರ್ ಅವರು ವಾದ ಮಂಡಿಸಿದ್ದರು. ರಾಜ್ಯಪಾಲರ ಪರವಾಗಿ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ, ಜೆಡಿಎಸ್ನ ಪ್ರದೀಪ್ಕುಮಾರ್ ಎಸ್.ಬಿ. ಅವರು ಅಭಿಯೋಜನೆಗೆ ಪೂರ್ವಾನುಮತಿ ಕೇಳಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.
ಕಳೆದ ಸೆ.2 ರಂದು ನಡೆದ ಸುದೀರ್ಘ ವಿಚಾರಣೆಯಲ್ಲಿ ದೂರುದಾರರಲ್ಲಿ ಒಬ್ಬರಾದ ಸ್ನೇಹಮಯಿ ಕೃಷ್ಣ ಪರ ವಕೀಲರು ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕವ್ಯಕ್ತಿ ಪೀಠ, ಸಿಎಂ ಪರ ವಕೀಲರು ಮತ್ತು ಸರ್ಕಾರದ ಪರ ಅಡ್ವೋಕೇಟ್ ಜನರಲ್ ಅವರ ವಾದ ಮಂಡನೆ ಕಾಲಾವಕಾಶ ಕೋರಿಕೆಯನ್ನು ಮನ್ನಿಸಿ ಪ್ರಕರಣದ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿತ್ತು.