ನೇಹಾ ಹತ್ಯೆ ಪ್ರಕರಣ | ಬಿಜೆಪಿಯಿಂದ ನಾಳೆ ರಾಜ್ಯಾದ್ಯಂತ ಪ್ರತಿಭಟನೆ
ನಮ್ಮ ಆದ್ಯತೆ ಏನಿದ್ದರೂ ‘ಧ್ಯೇಯ’ಕ್ಕೇ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏ.22 ರ ಸೋಮವಾರದಂದು ನಮ್ಮ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಲಾಗಿದೆ ಎಂದು ವಿಜಯೇಂದ್ರ ಅವರು ತಿಳಿಸಿದ್ದಾರೆ.
ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿರುವ ನೇಹಾ ಹಿರೇಮಠ ಹತ್ಯೆ ಪ್ರಕರಣ ಹಾಗೂ ಇತರ ಪ್ರಕರಣಗಳನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಸಜ್ಜಾಗಿದೆ.
ರಾಜ್ಯದ ವಿವಿಧೆಡೆ ಮುಸ್ಲಿಂ ಮತಾಂಧರಿಂದ ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ರಾಜ್ಯಾದ್ಯಂತ ಸೋಮವಾರ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯೇಂದ್ರ, "ಚುನಾವಣೆಯ ಗಡಿಬಿಡಿಯಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು. ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಅಮಾನುಷ ಘಟನೆ. ಇದನ್ನು ಪೋಲಿಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ, ಆದರೆ ಮುಖ್ಯಮಂತ್ರಿಗಳು,ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆಯುತ್ತಿರುವುದು ಸ್ಪಷ್ಟವಾಗಿದೆ, ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ" ಎಂದು ಅವರು ಹೇಳಿದ್ದಾರೆ.
ಭಾರತೀಯ ಜನತಾ ಪಾರ್ಟಿ ಸಿದ್ದಾಂತಕ್ಕಾಗಿ ಜನ್ಮ ತಾಳಿದ ಪಕ್ಷ , ನಮ್ಮ ಆದ್ಯತೆ ಏನಿದ್ದರೂ ‘ಧ್ಯೇಯ’ಕ್ಕೇ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22 ರ ಸೋಮವಾರದಂದು ನಮ್ಮ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಲಾಗಿದೆ ಎಂದು ವಿಜಯೇಂದ್ರ ಅವರು ತಿಳಿಸಿದ್ದಾರೆ.