
Accident | ಎರಡು ಪ್ರತ್ಯೇಕ ಅಪಘಾತ; ಒಂಬತ್ತು ಮಂದಿ ದಾರುಣ ಸಾವು
ಹಾವೇರಿ ಜಿಲ್ಲೆಯಲ್ಲಿ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಒಟ್ಟು ಆರು ಮಂದಿ ಮೃತಪಟ್ಟಿದ್ದು, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ಬಳಿ ಘಟನೆ ನಡೆದಿದೆ.
ಹಾವೇರಿ ಜಿಲ್ಲೆ ಹಾಗೂ ಬಾಗಲಕೋಟೆಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 9 ಮಂದಿ ದುರ್ಮರಣ ಹೊಂದಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರ ಬಳಿ ಘಟನೆ ನಡೆದಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಮತ್ತೊಬ್ಬರಿಗೆ ಗಾಯವಾಗಿದೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣಿಸುತ್ತಿದ್ದರು.
ಮೂವರು ಬಾಲಕರು ಸಾವು
ಓವರ್‌ಟೇಕ್ ಮಾಡಲು ಹೋಗಿ ಮೂವರು ಬಾಲಕರು ಕ್ಯಾಂಟರ್‌ಗೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈಪಾಸ್ನಲ್ಲಿ ನಡೆದಿದೆ. ಮುರನಾಳ ಗ್ರಾಮದ ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16) ಮತ್ತು ಕಾಮಣ್ಣ ಕುಪಲಿ (16) ಮೃತ ಬಾಲಕರು. ಘಟನಾ ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮದಲ್ಲಿ ಹನುಮ ಜಯಂತಿ ಹಿನ್ನೆಲೆ ಡಿ.ಜೆ ಮೆರವಣಿಗೆ ಆಯೋಜಿಸಲಾಗಿತ್ತು. ಡಿ.ಜೆ ಮೆರವಣಿಗೆ ವೀಕ್ಷಿಸಲು ಮೂವರು ಬಾಲಕರು ಬೈಕ್ನಲ್ಲಿ ತೆರಳುತ್ತಿದ್ದರು. ಗದ್ದನಕೇರಿ ಕ್ರಾಸ್ನಿಂದ ಹುಬ್ಬಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಬೈಕ್ಗೆ ಕ್ಯಾಂಟರ್ ಡಿಕ್ಕಿಯಾಗಿದೆ. ಮೂವರು ಬಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎಡ ಭಾಗದಿಂದ ಓವರ್ ಟೇಕ್ ಮಾಡಲು ಹೋಗಿ ಕ್ಯಾಂಟರ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ರಸ್ತೆ ಬದಿ ನಡೆದು ಹೋಗುತ್ತಿದ್ದ ಐವರು ಯುವಕರಿಗೂ ಬೈಕ್ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.