ವಾಲ್ಮೀಕಿ ನಿಗಮ ಪ್ರಕರಣ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ
x
ಮುಖ್ಯಮಂತ್ರಿ ಸಿದ್ದರಾಮಯ್ಯ

ವಾಲ್ಮೀಕಿ ನಿಗಮ ಪ್ರಕರಣ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ


Click the Play button to hear this message in audio format

ವಾಲ್ಮೀಕಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಶನಿವಾರ (ಜೂ.1) ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ ಅವರು, ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ರಚಿಸಲಾಗಿದೆ. ತನಿಖೆ ಚುರುಕಾಗಿ ನಡೆಯುತ್ತಿದ್ದು, ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಎಂಡಿ, ಲೆಕ್ಕಾಧಿಕಾರಿ ಬಂಧನ

ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಎಸ್ಐಟಿ ಅಧಿಕಾರಿಗಳು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಮತ್ತು ಲೆಕ್ಕಾಧಿಕಾರಿ ಪರುಶುರಾಮ್‌ ಜಿ. ದುರ್ಗಣ್ಣನವರ್ ಅವರನ್ನು ಬಂಧಿಸಿದ್ದಾರೆ. ಈ ಹಗರಣ ಬೆಳಕಿಗೆ ಬಂದ ನಂತರ ಮೇ 30ರಂದು ಇಬ್ಬರನ್ನೂ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿದ್ದ ಇಬ್ಬರನ್ನೂ ಅಧಿಕಾರಿಗಳು ಬಂಧಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಅವರು ಭಾನುವಾರ ಸಂಜೆ (ಮೇ 26) ಆತ್ಮಹತ್ಯೆಗೆ ಶರಣಾಗಿದ್ದು, ಅವರ ಡೆತ್‌ ನೋಟ್‌ನಲ್ಲಿ ನಿಗಮದ ಬ್ಯಾಂಕ್ ಖಾತೆಯಿಂದ 88.62 ಕೋಟಿ ರೂ.ಗಳನ್ನು ಅನಧಿಕೃತವಾಗಿ ವರ್ಗಾವಣೆ ಮಾಡಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ವಿನೋಬಾ ನಗರದ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್‌ ಅವರ ಪತ್ನಿ ದಾಖಲಿಸಿರುವ ದೂರು ಹಾಗೂ ಮೃತ ಅಧಿಕಾರಿಯ ಡೆತ್ ನೋಟ್ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸುತ್ತಿದೆ.

Read More
Next Story