
ಗೃಹ ಸಚಿವ ಡಾ. ಜಿ. ಪರಮೇಶ್ವರ್
Police Meeting | ಮಂಗಳೂರು ಗಲಭೆಗಳಿಂದ ಬೆಂಗಳೂರು, ಮೈಸೂರಿಗೆ ವಿದ್ಯಾರ್ಥಿಗಳ ವಲಸೆ; ಗೃಹ ಸಚಿವರ ಕಳವಳ
ಗಲಭೆಗಳಿಂದ ಕರಾವಳಿ ಭಾಗದ ಜನರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಮಂಗಳೂರು ಬಿಟ್ಟು ಬೆಂಗಳೂರು, ಮೈಸೂರಿಗೆ ತಮ್ಮ ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಕಳುಹಿಸುವ ಪರಿಸ್ಥಿತಿ ಬಂದಿದೆ ಎಂದು ಗೃಹ ಸಚಿವರು ಹೇಳಿದರು.
ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷದ ವಾತಾವರಣವು ಶೈಕ್ಷಣಿಕ ವಲಯದ ಮೇಲೆ ಗಂಭೀರ ಸ್ವರೂಪದ ಪರಿಣಾಮ ಉಂಟು ಮಾಡಿದೆ.
ಬುದ್ದಿವಂತರ ನಾಡು, ಶೈಕ್ಷಣಿಕ ಪ್ರಗತಿಯಲ್ಲಿ ಮುಂಚೂಣಿ ಸ್ಥಾನ ಕಾಯ್ದುಕೊಂಡಿರುವ ಮಂಗಳೂರಿನಲ್ಲಿ ಇತ್ತೀಚೆಗೆ ಕೋಮು ಸಂಘರ್ಷ ಹೆಚ್ಚುತ್ತಿರುವ ಕಾರಣ ಪೋಷಕರು ತಮ್ಮ ಮಕ್ಕಳನ್ನು ಮೈಸೂರು ಹಾಗೂ ಬೆಂಗಳೂರಿಗೆ ಕಳುಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಪೊಲೀಸ್ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸ್ವತಃ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೇ ಈ ವಿಷಯ ಪ್ರಸ್ತಾಪಿಸಿರುವುದು ಕಳವಳ ಮೂಡಿಸಿದೆ.
ಕರಾವಳಿ ಜಿಲ್ಲೆಯಲ್ಲಿ ನಡೆದ ಗಲಭೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಶೇಷ ಪೊಲೀಸ್ ಕಾರ್ಯಪಡೆ ಸ್ಥಾಪಿಸಿ ಆದೇಶಿಸಿತ್ತು. ದ್ವೇಷ ಭಾಷಣ ಮಾಡುವವರ ವಿರುದ್ದ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇನ್ನು ಮುಂದೆ ದ್ವೇಷ ಭಾಷಣ ಮಾಡಿದರೆ ವಿಶೇಷ ಪೊಲೀಸ್ ಕಾರ್ಯಪಡೆ ಕಠಿಣ ಕ್ರಮ ಜರುಗಿಸಲಿದೆ ಎಂದು ಪರಮೇಶ್ವರ್ ಎಚ್ಚರಿಸಿದ್ದಾರೆ.
ಕರಾವಳಿಯಲ್ಲಿ ಸೌಹಾರ್ದತೆ ಕಾಪಾಡಲು ವಿವಿಧ ಧಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಿರಂತರ ಸಭೆ ನಡೆಸಬೇಕು. ದ್ವೇಷ ಭಾಷಣ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ಸೂಚಿಸಿದರು.
ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಮ
ಕೋಮು ಗಲಾಟೆಗಳು ಶಿವಮೊಗ್ಗ ಜಿಲ್ಲೆಯಲ್ಲಿ ಇರಲಿಲ್ಲ. ಈಗ ಆ ಜಿಲ್ಲೆಗೂ ವ್ಯಾಪಿಸಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸದಿದ್ದಲ್ಲಿ ರಾಜ್ಯದಾದ್ಯಂತ ಮುಂದುವರಿಯುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಪೋಸ್ಟ್ ಹಾಕುವರ ವಿರುದ್ಧ, ಸುಳ್ಳು ಸುದ್ದಿ ಹರಡುವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು. ಈ ಬಗ್ಗೆ ಕ್ರಿಯಾ ಯೋಜನೆ ರೂಪಿಸುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅಧಿಕಾರಿಗಳು ಸೂಚಿಸಿದರು.
ಹೊರ ರಾಜ್ಯಗಳಿಂದ ಅಕ್ರಮವಾಗಿ ಡ್ರಗ್ಸ್ ಸಾಗಣೆ
ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಮಾದಕ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿ ಸಾಗಣೆಯಾಗುತ್ತಿವೆ. ಯುವಕರ ಕೈಗೆ ಗಾಂಜಾ ಸುಲಭವಾಗಿ ಸಿಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಬೇಸರವಿದೆ. ಇದನ್ನು ಸಂಪೂರ್ಣವಾಗಿ ಮಟ್ಟಹಾಕಲು ಪೊಲೀಸರು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ಯುವಜನತೆಯ ಭವಿಷ್ಯ ಹಾಳಾಗುತ್ತದೆ. ರಾಜ್ಯವನ್ನು ಉಡ್ತಾ ಪಂಜಾಬ್ನಂತೆ ಆಗಲು ಬಿಡಬಾರದು ಎಂದು ಹೇಳಿದರು.