ಮೇ 21ರಂದು ಆಂಧ್ರಕ್ಕೆ ಕುಮ್ಕಿ ಆನೆಗಳ ಹಸ್ತಾಂತರ ಮಾಡಲಿರುವ ಕರ್ನಾಟಕ
x

ಮೇ 21ರಂದು ಆಂಧ್ರಕ್ಕೆ ಕುಮ್ಕಿ ಆನೆಗಳ ಹಸ್ತಾಂತರ ಮಾಡಲಿರುವ ಕರ್ನಾಟಕ

ಕಳೆದ ವರ್ಷ ಆಗಸ್ಟ್ 8ರಂದು ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಭೇಟಿ ನೀಡಿ, ಆಂಧ್ರಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆಗಳನ್ನು ಸೆರೆಹಿಡಿಯಲು ಕುಮ್ಕಿ ಆನೆಗಳನ್ನು ನೀಡುವಂತೆ ಹಾಗೂ ತಮ್ಮ ರಾಜ್ಯದ ಮಾವುತರು ಮತ್ತು ಅರಣ್ಯ ಸಿಬ್ಬಂದಿಗೆ ಆನೆ ಸೆರೆ ಕಾರ್ಯಾಚರಣೆಯ ತರಬೇತಿ ನೀಡುವಂತೆ ಕೋರಿದ್ದರು.


ಕರ್ನಾಟಕವು ಮೇ 21ರಂದು ನೆರೆಯ ಆಂಧ್ರಪ್ರದೇಶಕ್ಕೆ ಕೆಲವು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಿದೆ. ಈ ಕ್ರಮವು ಉಭಯ ರಾಜ್ಯಗಳ ನಡುವಿನ ಸೌಹಾರ್ದ ಸಂಬಂಧವನ್ನು ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರಪ್ರದೇಶದಲ್ಲಿರುವ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಔಪಚಾರಿಕ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಪಳಗಿಸಿದ ಆನೆಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಳೆದ ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ನಡೆದ ಆನೆ-ಮಾನವ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ ರಾಜ್ಯಗಳ ನಡುವೆ ನಡೆದ ಉತ್ತಮ ವಿನಿಮಯ ಒಪ್ಪಂದದ ಭಾಗವಾಗಿ ಈ ಆನೆಗಳನ್ನು ಆಂಧ್ರಪ್ರದೇಶಕ್ಕೆ ನೀಡಲಾಗುತ್ತಿದೆ ಎಂದು ಖಂಡ್ರೆ ಅವರು ವಿವರಿಸಿದ್ದಾರೆ.

ಕಳೆದ ವರ್ಷ ಆಗಸ್ಟ್ 8ರಂದು ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಭೇಟಿ ನೀಡಿ, ಆಂಧ್ರಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆಗಳನ್ನು ಸೆರೆಹಿಡಿಯಲು ಕುಮ್ಕಿ ಆನೆಗಳನ್ನು ನೀಡುವಂತೆ ಹಾಗೂ ತಮ್ಮ ರಾಜ್ಯದ ಮಾವುತರು ಮತ್ತು ಅರಣ್ಯ ಸಿಬ್ಬಂದಿಗೆ ಆನೆ ಸೆರೆ ಕಾರ್ಯಾಚರಣೆಯ ತರಬೇತಿ ನೀಡುವಂತೆ ಕೋರಿದ್ದರು. ಸೆಪ್ಟೆಂಬರ್ 27ರಂದು ತಮ್ಮ ನೇತೃತ್ವದ ನಿಯೋಗ ವಿಜಯವಾಡಕ್ಕೆ ಭೇಟಿ ನೀಡಿದಾಗ ಈ ಸಂಬಂಧ ಎರಡೂ ರಾಜ್ಯಗಳ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಅದರಂತೆ ಮೇ 21 ರಂದು ಆನೆಗಳನ್ನು ಹಸ್ತಾಂತರಿಸಲಾಗುತ್ತಿದೆ ಎಂದು ಸಚಿವ ಖಂಡ್ರೆ ಅವರು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಕೋಲಾರ ಜಿಲ್ಲೆಯಲ್ಲೂ ಆನೆ-ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಆಂಧ್ರಪ್ರದೇಶವು ನಡೆಸಲಿರುವ ಆನೆ ಸೆರೆ ಕಾರ್ಯಾಚರಣೆಯು ಮುಂದಿನ ದಿನಗಳಲ್ಲಿ ನಮ್ಮ ರಾಜ್ಯಕ್ಕೆ ಕಾಡಾನೆಗಳು ಬರದಂತೆ ತಡೆಯಲು ಸಹಾಯಕವಾಗಲಿದೆ. ಈ ಹಿನ್ನೆಲೆಯಲ್ಲಿ ಕುಮ್ಕಿ ಆನೆಗಳ ಹಸ್ತಾಂತರದಿಂದ ರಾಜ್ಯಕ್ಕೂ ಪರೋಕ್ಷ ಲಾಭವಾಗಲಿದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ಕರ್ನಾಟಕದ ಹೆಮ್ಮೆಯ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಅಥವಾ ಅದಕ್ಕಾಗಿ ಗುರುತಿಸಲಾಗಿರುವ ಯಾವುದೇ ಕುಮ್ಕಿ ಆನೆಯನ್ನು ಆಂಧ್ರಪ್ರದೇಶಕ್ಕೆ ನೀಡಲಾಗುತ್ತಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Read More
Next Story