ನಮ್ಮ ಪಾದಯಾತ್ರೆ ಯಶಸ್ವಿ, ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಆರ್ ಅಶೋಕ್
ಮುಡಾ ಹಗರಣದ ವಿರುದ್ಧ ನಮ್ಮ ಪಾದಯಾತ್ರೆ ಹೋರಾಟ ಯಶಸ್ವಿಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಧಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದರ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʻʻಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶವಾಗಿದೆ. ಇದರ ಸತ್ಯ ಏನೆಂದು ರಾಜ್ಯದ ಜನತೆಗೆ ತಿಳಿಯಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆʼʼ ಎಂದು ಹೇಳಿದರು.
ʻʻಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು. ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಇಷ್ಟೆಲ್ಲ ಆಗಿರುವಾಗ ಇದು ದೊಡ್ಡ ಹಗರಣ ಎಂಬುದು ಸಾಬೀತಾಗಿದೆʼʼ ಎಂದರು.
ʻʻಕಾಂಗ್ರೆಸ್ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್ ಪಡೆಯಬೇಕೆಂಬುದು ನಮ್ಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕುʼʼ ಎಂದು ಆಗ್ರಹಿಸಿದರು.
ʻʻಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ, ರಾಜ್ಯಪಾಲರು ಸರ್ಕಾರದ ಭಾಗ. ಅವರ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸಿದರೆ ಅವರು ಸಂವಿಧಾನಕ್ಕೆ ತೋರುವ ಅಗೌರವʼʼ ಎಂದು ಆರ್ ಅಶೋಕ್ ಎಂದರು.