
Pahalgam Terror Attack| ಪಹಲ್ಗಾಮ್ ದಾಳಿ; ರಾಜ್ಯದ ವಿವಿಧೆಡೆ ಪ್ರತಿಭಟನೆ
ಪಹಲ್ಗಾಮ್ ದಾಳಿ ಖಂಡಿಸಿ ರಾಜ್ಯದ ವಿವಿಧೆಡೆ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿವೆ. ಪಾಕ್ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿವೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ರಾಜ್ಯದ ವಿವಿಧೆಡೆ ಹಿಂದೂ ಪರ ಸಂಘಟನೆಗಳು, ಕಾಂಗ್ರೆಸ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.
ಕಲಬುರಗಿಯಲ್ಲಿ ಶುಕ್ರವಾರ (ಏ.25) ರಸ್ತೆಗೆ ಪಾಕಿಸ್ತಾನ ಧ್ವಜದ ಸ್ಟಿಕ್ಕರ್ ಅಂಟಿಸಿ ಅದರ ಮೇಲೆ ವಾಹನಗಳು ಚಲಿಸುವಂತೆ ಮಾಡಿ ಬಜರಂಗದಳ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನೆ ತಡೆದರು.
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನಲ್ಲಿ ಕಾಂಗ್ರೆಸ್ ಶಾಸಕ ಜಿ. ಹಂಪಯ್ಯನಾಯಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಇದೊಂದು ಹೇಯ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಜಯನಗರ ಜಿಲ್ಲಾ ಹಿಂದೂ ಪರಿಷತ್ ಸಂಘಟನೆಯಿಂದ ಹೊಸಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿಅಂಗಡಿ ಮುಂಗಟ್ಟು ಮುಚ್ಚುವ ಮೂಲಕ ಬಂದ್ ಆಚರಿಸಲಾಯಿತು. ಉಗ್ರರ ದಾಳಿ ಖಂಡಿಸಿ ಉಪ್ಪಿನಂಗಡಿಯಲ್ಲಿ ಹಿಂದೂ ಸಂರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಹಣತೆ ಬೆಳಗಿಸುವ ಮೂಲಕ ಮೃತಪಟ್ಟವರಿಗೆ ಸಂತಾಪ ಸೂಚಿಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕನ್ನಡ ಪರ ಸಂಘಟನೆಗಳು ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದರು.
ಉಗ್ರರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಉದ್ಯಮಿ ಮಂಜುನಾಥ್ ರಾವ್ ಅವರ ಅಂತ್ಯಕ್ರಿಯೆ ವೇಳೆಯೂ ಅರ್ಧದಿನ ಅಂಗಡಿಗಳನ್ನು ಬಂದ್ ಮಾಡಿ ಘಟನೆ ಖಂಡಿಸಿದ್ದರು.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿ 26ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು.
ಉಗ್ರ ದಾಳಿಯ ನಂತರ ಉನ್ನತ ಮಟ್ಟದ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಿಂಧೂ ನದಿ ಒಪ್ಪಂದ ಸ್ಥಗಿತ ಸೇರಿದಂತೆ ಐದು ಪ್ರಮುಖ ನಿರ್ಣಯಗಳನ್ನು ಕೈಗೊಂಡಿದ್ದರು. ಭಾರತದಲ್ಲಿ ನೆಲೆ ನಿಂತಿರುವ ಪಾಕ್ ಪ್ರಜೆಗಳಿಗೆ ತವರಿಗೆ ವಾಪಸ್ ತೆರಳಲು ಎರಡು ದಿನಗಳ ಕಾಲಾವಕಾಶ ನೀಡಲಾಗಿತ್ತು.