
ಸಾರಿಗೆ ಮುಷ್ಕರ | ಡಿ.31 ರಿಂದ ರಸ್ತೆಗೆ ಇಳಿಯುವುದಿಲ್ಲ ಬಸ್: ವಿವಿಧ ಜಿಲ್ಲೆಗಳಲ್ಲಿ ಕರಪತ್ರ ಹಂಚಿಕೆ
ಸಾರಿಗೆ ಇಲಾಖೆ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸದೇ ಹೋದರೆ ಡಿ.31 ರಿಂದ ಮುಷ್ಕರ ನಡೆಸುವುದು ಅನಿವಾರ್ಯ. ತಮ್ಮ ಹೋರಾಟಕ್ಕೆ ಪ್ರಯಾಣಿಕರು ಸಹಕರಿಸಬೇಕು ಎಂದು ನೌಕರರು ಕರಪತ್ರ ಹಂಚಿದ್ದಾರೆ.
ಬಾಕಿ ವೇತನ, ವೈದ್ಯಕೀಯ ಚಿಕಿತ್ಸಾ ವೆಚ್ಚ, ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಸಂಬಂಧ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಸಾರಿಗೆ ನೌಕರರು ಬುಧವಾರ ಕೂಡ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರಯಾಣಿಕರಿಗೆ ಕರಪತ್ರ ಹಂಚಿದ್ದಾರೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗೆ ಶೇ 25 ರಷ್ಟುಆದಾಯ ಹೆಚ್ಚಿದೆ. ಆದರೂ, ಯೋಜನೆಯ ಹಣವನ್ನು ಸರ್ಕಾರ ಸಾರಿಗೆ ನಿಗಮಗಳಿಗೆ ಪಾವತಿಸಿಲ್ಲ. ಇದರಿಂದ ನೌಕರರು ಪರಿತಪಿಸುವಂತಾಗಿದೆ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೇ ಹೋದರೆ ಡಿ.31 ರಿಂದ ಮುಷ್ಕರ ಅನಿವಾರ್ಯ. ಪ್ರಯಾಣಿಕರು ನಮ್ಮ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಹಾಗೂ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯದಿಂದ ನೌಕರರ 38 ತಿಂಗಳ ವೇತನ ಬಾಕಿ ಉಳಿದಿದೆ. ರಾಜ್ಯ ಸರ್ಕಾರ ಕೂಡಲೇ ಕೆಎಸ್ಆರ್ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ 38 ತಿಂಗಳ ಬಾಕಿ ವೇತನವಾಗಿ 1,750 ಕೋಟಿ ರೂ. ತಕ್ಷಣ ಪಾವತಿಸಬೇಕು. ಮೂಲವೇತನವನ್ನು ಶೇ 25 ರಷ್ಟು ಹೆಚ್ಚಿಸಬೇಕು. ಶೇ 31 ರಷ್ಟು ತುಟ್ಟಿ ಭತ್ಯೆ ವಿಲೀನಗೊಳಿಸಿ ವೇತನ ಶ್ರೇಣಿ ಸಿದ್ಧಪಡಿಸಬೇಕು. ನೌಕರರ ಭತ್ಯೆಯನ್ನು ಶೇ.5 ಪಟ್ಟು ಹೆಚ್ಚಳ ಮಾಡಬೇಕು. ಮಾಸಿಕ 2000 ರೂ. ವೈದ್ಯಕೀಯ ಚಿಕಿತ್ಸಾ ವೆಚ್ಚ ನೀಡಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಗಳಾಗಿವೆ.
ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಆಗಸ್ಟ್ ತಿಂಗಳಲ್ಲಿ ಸರ್ಕಾರದ ಗಮನ ಸೆಳೆಯಲಾಗಿತ್ತು. ಅದಾದ ಬಳಿಕ ಅ.9 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೆ ನಡೆದ ಸಭೆಯಲ್ಲೂ ಪ್ರಸ್ತಾಪ ಮಾಡಲಾಗಿತ್ತು. ಆದರೆ, ಹಿರಿಯ ಅಧಿಕಾರಿಗಳು ಬಸ್ ಪ್ರಯಾಣ ದರ ಹೆಚ್ಚಿಸದ ಹೊರತು ವೇತನ ಹೆಚ್ಚಳ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಅಂದಿನ ಸಭೆಯಲ್ಲಿ ನೌಕರರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ಸಚಿವರು ಭರವಸೆ ನೀಡಿದ್ದರು. ಈವರೆಗೂ ಅದು ಭರವಸೆಯಾಗಿಯೇ ಉಳಿದಿದೆ. ಡಿ. 31 ರೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರ ನಡೆಸುವುದು ಶತಸಿದ್ಧ ಎಂದು ಜಂಟಿ ಕ್ರಿಯಾ ಸಮಿತಿ ಹೇಳಿದೆ.