ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಸಿಎಂ: ಗೃಹ ಸಚಿವ ಪರಮೇಶ್ವರ್ ಬೆಂಬಲ
x

ಜಿ. ಪರಮೇಶ್ವರ್‌ 

ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಸಿಎಂ: ಗೃಹ ಸಚಿವ ಪರಮೇಶ್ವರ್ ಬೆಂಬಲ

ಮೇ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರವಿದೆ ಎಂಬ ಚರ್ಚೆಗಳು ನಡೆಯುತ್ತಲೇ ಇವೆ.


Click the Play button to hear this message in audio format

ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ನಮ್ಮ ದೃಷ್ಟಿಯಲ್ಲಿ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅಧಿಕಾರ ಹಂಚಿಕೆಯ ಊಹಾಪೋಹಗಳಿಗೆ ಹೊಸ ತಿರುವು ನೀಡಿದ್ದಾರೆ.

ಮಂಗಳವಾರ (ಅ.28) ಬೆಂಗಳೂರಿನಲ್ಲಿ ಮಾತನಾಡಿದ ಅವರು, 2023ರಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗ, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರನ್ನು ಆಯ್ಕೆ ಮಾಡುವಾಗ ಸಿದ್ದರಾಮಯ್ಯ ಅವರು ಕೇವಲ ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ಎಂದು ನಮಗೆ ಯಾರೂ ಹೇಳಿರಲಿಲ್ಲ. ಅಂತಹ ಯಾವುದೇ ಸಮಯ ನಿಗದಿಯೂ ಆಗಿರಲಿಲ್ಲ,” ಎಂದು ಹೇಳಿದರು.

ನಾಯಕತ್ವದ ಗೊಂದಲ ಬಗೆಹರಿಸಲು ಹೈಕಮಾಂಡ್‌ಗೆ ಮನವಿ

ಮುಖ್ಯಮಂತ್ರಿ ಬದಲಾವಣೆ ಕುರಿತ ನಿರಂತರ ಚರ್ಚೆಗಳಿಂದ ಉಂಟಾಗಿರುವ ಗೊಂದಲವನ್ನು ಬಗೆಹರಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುವುದಾಗಿಯೂ ಪರಮೇಶ್ವರ್ ತಿಳಿಸಿದರು. ನಮ್ಮ ದೃಷ್ಟಿಯಲ್ಲಿ ಸಿದ್ದರಾಮಯ್ಯನವರನ್ನು ಐದು ವರ್ಷದ ಅವಧಿಗೆ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಇದರ ನಡುವೆ ಹೈಕಮಾಂಡ್ ಏನಾದರೂ ತೀರ್ಮಾನ ತೆಗೆದುಕೊಂಡರೆ ಅದು ಅವರಿಗೆ ಬಿಟ್ಟಿದ್ದು. ದಿನನಿತ್ಯ ನಾವು ಹೇಳಿಕೆ ನೀಡುವುದು ಸರಿಯಲ್ಲ. ಸಂದರ್ಭ ಬಂದಾಗ ಈ ಗೊಂದಲವನ್ನು ನಿವಾರಿಸುವಂತೆ ನಾನು ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.

ಚರ್ಚೆಯ ಹಿನ್ನೆಲೆ

ಮೇ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರವಿದೆ ಎಂಬ ಚರ್ಚೆಗಳು ನಡೆಯುತ್ತಲೇ ಇವೆ. ಇತ್ತೀಚೆಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ನಾನೇ ಸಿಎಂ" ಎಂದು ಹೇಳುವ ಮೂಲಕ ಚರ್ಚೆಗೆ ಹೊಸ ಆಯಾಮ ನೀಡಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ, ಈ ಹಿಂದೆ ತಾವೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಸಿದ್ದರಾಮಯ್ಯ ಅವರ ಪರ ಬ್ಯಾಟಿಂಗ್ ಮಾಡಿರುವುದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Read More
Next Story