
ಸಂತ್ರಸ್ತರ ಮನೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿ ನೀಡಿ ಸಾಂತ್ವಾನ ಹೇಳಿದರು.
ಮರ್ಯಾದಾ ಹತ್ಯೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸಂತ್ರಸ್ತರಿಗೆ ನ್ಯಾಯ; ಪರಮೇಶ್ವರ್
ರಾಜ್ಯದಲ್ಲಿ ಹೆಚ್ಚುತ್ತಿರುವ ಮರ್ಯಾದಾ ಹತ್ಯೆ ಪ್ರಕರಣಗಳನ್ನು ತಡೆಯಲು ಈಗಿರುವ ಕಾನೂನುಗಳು ಸಾಕೇ ಅಥವಾ ಹೊಸ ಕಾನೂನಿನ ಅಗತ್ಯವಿದೆಯೇ ಎಂಬ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಇನಾಂ ವೀರಾಪುರದ ಮರ್ಯಾದಾ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ವಿಚಾರಣೆಯನ್ನು ವಿಶೇಷ ಎಂದು ಪರಿಗಣಿಸಲಾಗಿದೆ ತನಿಖೆ ಚುರುಕುಗೊಳಿಸಲು ಮತ್ತು ತಪ್ಪಿತಸ್ಥರಿಗೆ ಆದಷ್ಟು ಬೇಗ ಕಠಿಣ ಶಿಕ್ಷೆ ಕೊಡಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದ್ದಾರೆ.
ಬುಧವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, "ಈ ಪ್ರಕರಣ ಅತ್ಯಂತ ಕ್ರೂರ ಮತ್ತು ಅಮಾನುಷವಾಗಿದ್ದು, ಇದನ್ನು ಸಾಧಾರಣ ಪ್ರಕರಣದಂತೆ ಪರಿಗಣಿಸಲು ಸಾಧ್ಯವಿಲ್ಲ. ವಿಚಾರಣೆಯಲ್ಲಿ ವಿಳಂಬವಾಗಬಾರದು ಎಂಬ ಉದ್ದೇಶದಿಂದ ವಿಶೇಷ ಅಭಿಯೋಜಕರನ್ನು ನೇಮಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗುವುದು," ಎಂದರು.
ಕಾನೂನು ತಿದ್ದುಪಡಿಯ ಸುಳಿವು
ರಾಜ್ಯದಲ್ಲಿ ಹೆಚ್ಚುತ್ತಿರುವ ಮರ್ಯಾದಾ ಹತ್ಯೆ ಪ್ರಕರಣಗಳನ್ನು ತಡೆಯಲು ಈಗಿರುವ ಕಾನೂನುಗಳು ಸಾಕೇ ಅಥವಾ ಹೊಸ ಕಾನೂನಿನ ಅಗತ್ಯವಿದೆಯೇ ಎಂಬ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. "ಮರ್ಯಾದಾ ಹತ್ಯೆ ತಡೆಗೆ ಈಗಾಗಲೇ ಹಲವು ಕಾನೂನುಗಳಿವೆ. ಆದರೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಆತಂಕಕಾರಿ. ಹೀಗಾಗಿ ಪ್ರಸ್ತುತ ಕಾನೂನುಗಳಿಗೆ ತಿದ್ದುಪಡಿ ತರುವ ಅಥವಾ ಅಗತ್ಯವಿದ್ದರೆ ಹೊಸ ಕಠಿಣ ಕಾನೂನು ರೂಪಿಸುವ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು," ಎಂದು ಪರಮೇಶ್ವರ ತಿಳಿಸಿದರು.
ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಮತ್ತು ನೆರವು
ದೌರ್ಜನ್ಯಕ್ಕೊಳಗಾದ ಯುವಕನಿಗೆ ಮತ್ತು ಆತನ ಕುಟುಂಬಕ್ಕೆ ಸರ್ಕಾರ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ ಗೃಹಸಚಿವರು, ಈ ಕೆಳಗಿನ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಹೇಳಿದರು. ದೌರ್ಜನ್ಯಕ್ಕೆ ಒಳಗಾದ ಯುವಕನಿಗೆ ಜೀವನೋಪಾಯಕ್ಕಾಗಿ ಸರ್ಕಾರಿ ಉದ್ಯೋಗ ಒದಗಿಸಲಾಗುವುದು. ಯುವಕನ ಸಹೋದರಿಗೆ ಉನ್ನತ ಶಿಕ್ಷಣಕ್ಕಾಗಿ ಸಂಪೂರ್ಣ ಆರ್ಥಿಕ ನೆರವು ನೀಡುವ ವ್ಯವಸ್ಥೇ ಮಾಡಲಾಗುವುದರು. ಆರೋಪಿಗಳಿಗೆ ಕಾನೂನಿನಡಿಯಲ್ಲಿ ಸಿಗಬಹುದಾದ ಗರಿಷ್ಠ ಶಿಕ್ಷೆಯನ್ನು ಕೊಡಿಸುವ ಮೂಲಕ ಸಮಾಜಕ್ಕೆ ಮಾದರಿ ಸಂದೇಶ ರವಾನಿಸುವುದು.
ಘಟನೆಯ ಹಿನ್ನೆಲೆಯೇನು?
ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ ಯುವತಿಯ ಮನೆಯವರೇ ಆಕೆಯನ್ನು ಅಮಾನುಷವಾಗಿ ಹತ್ಯೆ ಮಾಡಿದ್ದರು. ದಲಿತ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ಸ್ವಂತ ಪೋಷಕರು ಮತ್ತು ಸಂಬಂಧಿಕರೇ ಸೇರಿ ಈ ಕೃತ್ಯ ಎಸಗಿದ್ದರು ಎನ್ನಲಾಗಿದೆ. ಈ ವೇಳೆ ಆಕೆ ಗರ್ಭವತಿಯಾಗಿದ್ದಳು. ಯುವಕನ ಮೇಲೆಯೂ ಹಲ್ಲೆ ನಡೆಸಲಾಗಿದ್ದು, ಆತ ತೀವ್ರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಕರ್ನಾಟಕದಲ್ಲಿ ಸಂಚಲನ ಮೂಡಿಸಿತ್ತು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ಪ್ರಮುಖ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಾಥಮಿಕ ಚಾರ್ಜ್‌ಶೀಟ್ ಸಲ್ಲಿಕೆಗೆ ತಯಾರಿ ನಡೆಯುತ್ತಿದ್ದು, ಡಿಎನ್‌ಎ ಪರೀಕ್ಷೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿಗಳಿಗಾಗಿ ಕಾಯಲಾಗುತ್ತಿದೆ. ಸಾಕ್ಷ್ಯ ನಾಶಪಡಿಸಲು ಯತ್ನಿಸಿದವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಸಾರ್ವಜನಿಕ ಅಭಿಯಾನ ಮತ್ತು ಆಕ್ರೋಶ
ಸೋಷಿಯಲ್ ಮೀಡಿಯಾದಲ್ಲಿ ಈ ಘಟನೆಯ ವಿರುದ್ಧ ದೊಡ್ಡ ಮಟ್ಟದ ಅಭಿಯಾನ ನಡೆಯುತ್ತಿದೆ. ಸಾವಿರಾರು ಜನರು ಮರ್ಯಾದಾ ಹತ್ಯೆಯನ್ನು ಖಂಡಿಸಿ ಪೋಸ್ಟ್ ಮಾಡುತ್ತಿದ್ದಾರೆ.

