ರೇಣುಕಾಸ್ವಾಮಿ ಕೊಲೆ ಪ್ರಕರಣ | ಪವಿತ್ರಾ ಗೌಡಗೆ ಮತ್ತೆ ನಿರಾಸೆ; ಜಾಮೀನು ವಜಾ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ7 ಆರೋಪಿ ಅನುಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ7 ಆರೋಪಿ ಅನುಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ಶನಿವಾರ ವಜಾ ಮಾಡಿದೆ.
ಪವಿತ್ರಾ ಗೌಡ ಪರವಾಗಿ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ನಲ್ಲಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಬಳಿಕ ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಶನಿವಾರ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಎ7 ಆರೋಪಿ ಅನುಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೂಡ ಕೋರ್ಟ್ ವಜಾಗೊಳಿಸಿದೆ.
ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ಸೆ. 9ರವರೆಗೂ ವಿಸ್ತರಣೆ ಮಾಡಿದೆ. ಮಂಗಳವಾರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಮುಕ್ತಾಯವಾದ ಹಿನ್ನಲೆಯಲ್ಲಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಎದುರು ಹಾಜರು ಮಾಡಲಾಗಿತ್ತು. ಈ ವೇಳೆ ಅವರ ನ್ಯಾಯಾಂಗ ಬಂಧವನ್ನು ವಿಸ್ತರಣೆ ಮಾಡಿದೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್, ಆತನ ಪ್ರೇಯಸಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳಿದ್ದು, ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಅನುಭವಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಉಳಿದ ಹಲವು ಸಹಚರರನ್ನು ಕೂಡ ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸಿದ್ದು, ಪವಿತ್ರಾ ಗೌಡ ಮಾತ್ರ ಪರಪ್ಪನ ಅಗ್ರಹಾರದಲ್ಲಿಯೇ ಇಡಲಾಗಿದೆ.