
ಪೆನ್‌ಡ್ರೈವ್ ಪ್ರಕರಣ| ಸಿಬಿಐಗೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ: ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ಮನವಿ
ಹಾಸನ ಪ್ರಕರಣ ಸೇರಿ ಪೆನ್ ಡ್ರೈವ್ ಹಂಚಿಕೆ ಪ್ರಕರಣಗಳ ತನಿಖೆ ಇತ್ಯಾದಿ ವಿಷಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗವು ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಕೆ ಸಲ್ಲಿಸಿದೆ.
ರಾಜ್ಯಪಾಲರನ್ನು ಭೇಟಿ ಮಾಡಿರುವ ಜೆಡಿಎಸ್ ನಿಯೋಗ ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮನವಿ ಮಾಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗದಲ್ಲಿ ಶಾಸಕ ಜಿ.ಟಿ.ದೇವೆಗೌಡ, ಬಂಡೆಪ್ಪ ಕಾಶ್ಯಂಪೂರ್ ಸೇರಿದಂತೆ ಹಲವರು ಇದ್ದರು.
ಹಾಸನ ಪೆನ್‌ಡ್ರೈವ್ ವಿಚಾರವಾಗಿ ಇದೀಗ ರಾಜಕೀಯ ಆರೋಪ ಪ್ರತ್ಯಾರೋಪಗಳು ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ ಹಾಗೂ ಎಚ್‌ಡಿ ರೇವಣ್ಣ ವಿರುದ್ಧ ಅತ್ಯಾಚಾರ, ಕಿಡ್ನಾಪ್ ಪ್ರಕರಣ ದಾಖಲಾಗಿದೆ. ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ತನಿಖೆಗೆ ಈಗಾಗಲೇ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಆದರೆ ಎಸ್‌ಐಟಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಿರ್ದೇಶನದಂತೆ ಕೆಲಸ ಮಾಡುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ಈ ನಿಟ್ಟಿನಲ್ಲಿ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದರು.
ಅಷ್ಟೇ ಅಲ್ಲದೆ, ಇಡೀ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಪಾತ್ರ ಇದೆ. ಅವರೇ ಇದರ ಸೂತ್ರಧಾರಿಗಳು. ಪೆನ್‌ಡ್ರೈವ್ ಬಿಡುಗಡೆ ಮಾಡಿರುವುದರ ಹಿಂದೆ ಡಿಕೆಶಿ ಸಂಚಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದೀಗ ಇದರ ಬೆನ್ನಲ್ಲೇ ಕುಮಾರಸ್ವಾಮಿ ಅವರು ಜೆಡಿಎಸ್ ನಿಯೋಗದೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಈ ಪ್ರಕರಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಸಿಬಿಐಗೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಭೇಟಿ ಸಂದರ್ಭದಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.