ಅತ್ಯಾಚಾರ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ
x

ಅತ್ಯಾಚಾರ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ


ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಅಮಾನತುಗೊಂಡಿರುವ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಅವರು ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ತಮ್ಮ ವಕೀಲರ ಮೂಲಕ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನುಗೆ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಠಾಣೆ ಕ್ರೈಂ ನಂಬರ್ 20/2024 ಸೈಬರ್ ಕ್ರೈಂ ಠಾಣೆ ಕ್ರೈಂ ನಂಬರ್ 2/ 2024 ಹಾಗೂ ಹೊಳೆನರಸೀಪುರ ಠಾಣೆ ಕ್ರೈಂ ನಂಬರ್ 107/ 2024 ಸೇರಿದಂತೆ ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಅಧಿಕೃತ ಮೂಲಗಳ ಪ್ರಕಾರ, ಪ್ರಜ್ವಲ್ ಅವರು ಮೇ 30 ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗುವ ವಿಮಾನ ಟಿಕೆಟ್ ಅನ್ನು ಬುಕ್ ಮಾಡಿದ್ದಾರೆ ಮತ್ತು ಮೇ 31 ರಂದು ಬೆಂಗಳೂರಿಗೆ ಬಂದಿಳಿಯುವ ನಿರೀಕ್ಷೆಯಿದೆ. ಈ ನಡುವೆ ಪ್ರಜ್ವಲ್‌ ಪರ ವಕೀಲರು ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ಪ್ರಜ್ವಲ್, 47 ವರ್ಷದ ಮಹಿಳೆಯೊಂದಿಗೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ಏಪ್ರಿಲ್ 27 ರಂದು ಪ್ರಜ್ವಲ್ ಜರ್ಮನಿಗೆ ತೆರಳಿದರು ಎಂದು ವರದಿಯಾಗಿತ್ತು. ಹಾಸನ ಲೋಕಸಭಾ ಸ್ಥಾನಕ್ಕೆ ಚುನಾವಣೆ ನಡೆದ ಒಂದು ದಿನದ ನಂತರ ಮತ್ತು ಇನ್ನೂ ತಲೆಮರೆಸಿಕೊಂಡಿದ್ದಾರೆ. ಎಸ್‌ಐಟಿ ಸಲ್ಲಿಸಿದ ಅರ್ಜಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೇ 18 ರಂದು ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಆದರೆ, ನಂತರ ಎಸ್‌ಐಟಿ ಮಹಿಳೆಯ ಅಪಹರಣದಲ್ಲಿ ಭಾಗಿಯಾಗಿರುವ ಅವರ ತಂದೆ, ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಬಂಧಿಸಿತು.

ಮೇ 31 ರಂದು ಪ್ರಜ್ವಲ್ ಆಗಮಿಸುವ ನಿರೀಕ್ಷೆ ಇದೆ ಹಾಗಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅವರು ಬಂದಿಳಿದ ಕ್ಷಣದಲ್ಲಿ ಎಸ್‌ಐಟಿ ಅವರನ್ನು ಬಂಧಿಸುವ ಸಾಧ್ಯತೆಯಿದೆ.

ಏತನ್ಮಧ್ಯೆ, ಪ್ರಜ್ವಲ್ ಅವರ ತಾಯಿ ಭವಾನಿ ರೇವಣ್ಣ ಅವರು ಕೂಡ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಎಸ್‌ಐಟಿ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದು, ಇದೇ ಪ್ರಕರಣದಲ್ಲಿ ಎಚ್‌ಡಿ ರೇವಣ್ಣ ಅವರಿಗೆ ನೀಡಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆಯೂ ಎಸ್‌ಐಟಿ ಕೋರಿದೆ.

ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮೇ 31ಕ್ಕೆ ಕಾಯ್ದಿರಿಸಲಾಗಿದೆ.

Read More
Next Story