ಪ್ರಜ್ವಲ್ ಬಂಧನ: ಇಂದು ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ 35 ದಿನಗಳ ಬಳಿಕ ಜರ್ಮನಿಯಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ತಡರಾತ್ರಿ 12.50 ಗಂಟೆಗೆ ಸುಮಾರಿಗೆ ಬಂದಿಳಿದರು. ನಿಲ್ದಾಣದಲ್ಲಿ ಮೊಕ್ಕಾಂ ಹೂಡಿದ್ದ ಎಸ್‌ಐಟಿ ಅಧಿಕಾರಿಗಳು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಸಿಬ್ಬಂದಿ ಹಾಗೂ ವಲಸೆ ಅಧಿಕಾರಿಗಳ ಸಹಾಯದಿಂದ ಪ್ರಜ್ವಲ್ ನನ್ನು ಬಂಧಿಸಿದರು. ಗುರುವಾರ ರಾತ್ರಿ ಸಿಐಡಿ ಕಟ್ಟಡದಲ್ಲಿರುವ ಸೆಲ್‌ನಲ್ಲಿ ಪ್ರಜ್ವಲ್ ಅವರನ್ನು ಇರಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಜೊತೆಗೆ, ಎಸ್‌ಐಟಿ ಪೊಲೀಸರು ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ.
ನ್ಯಾಯಾಲಯಕ್ಕೆ ಹಾಜರುಪಡಿಸುವುದಕ್ಕೂ ಮುನ್ನ ಪ್ರಜ್ವಲ್ ರೇವಣ್ಣ ಅವರ ವೈದ್ಯಕೀಯ ತಪಾಸಣೆ ನಡೆಸಲಿದ್ದು, ಅದಕ್ಕಾಗಿ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗುತ್ತದೆ.
ಪ್ರಜ್ವಲ್ ಬಂಧನಕ್ಕೆ ನ್ಯಾಯಾಲಯದಿಂದ ವಾರಂಟ್ ಜಾರಿಯಲ್ಲಿದೆ. ಹೀಗಾಗಿ, ಪ್ರಜ್ವಲ್ ಅವರನ್ನು ಬಂಧಿಸಲಾಗಿದೆ. ಹಾಸನದ ಸೈಬರ್ ಠಾಣೆ, ಹೊಳೆನರಸೀಪುರ ಠಾಣೆ ಹಾಗೂ ಸಿಐಡಿ ಠಾಣೆಯಲ್ಲಿದಾಖಲಾಗಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ ಪ್ರಜ್ವಲ್ ಪರ ವಕೀಲ ಅರುಣ್, ತುರ್ತು ವಿಚಾರಣೆ ನಡೆಸುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದರು. ಇದಕ್ಕೆ ಸಮ್ಮತಿಸದ ಕೋರ್ಟ್ ವಿಚಾರಣೆ ಮುಂದೂಡಿದ್ದು, ಶುಕ್ರವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ.
ಪ್ರಕರಣದಲ್ಲಿ ಇದುವರೆಗೂ ಕಲೆಹಾಕಿರುವ ಮಾಹಿತಿಯನ್ನು ನ್ಯಾಯಾಲಯಕ್ಕೆ ತಿಳಿಸಲಾಗುವುದು. ಆರೋಪಿ ವಿಚಾರಣೆ ಅಗತ್ಯವಿರುವುದಾಗಿ ನ್ಯಾಯಾಲಯಕ್ಕೆ ಹೇಳಿ ಕಸ್ಟಡಿಗೆ ಪಡೆಯಲಾಗುವುದು ಎಂದು ಎಸ್‌ಐಟಿ ಮೂಲಗಳು ಹೇಳಿವೆ.