
ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆಗಸ್ಟ್ 10ರಂದು ಪ್ರಧಾನಿ ಮೋದಿ ಚಾಲನೆ
ಈ ವಿಷಯವನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಮಾಧ್ಯಮ 'ಎಕ್ಸ್' (X) ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ
.
ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಮತ್ತೊಂದು ದೊಡ್ಡ ಮೈಲಿಗಲ್ಲು ಸೇರ್ಪಡೆಯಾಗಲಿದೆ. ಬಹುನಿರೀಕ್ಷಿತ ನಮ್ಮ ಮೆಟ್ರೋದ ಹಳದಿ ಮಾರ್ಗವು (ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ) ಆಗಸ್ಟ್ 10, 2025 ರಂದು ಲೋಕಾರ್ಪಣೆಗೊಳ್ಳಲಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.
ಈ ವಿಷಯವನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಮಾಧ್ಯಮ 'ಎಕ್ಸ್' (X) ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.
ಈ ಮಾರ್ಗವು 19.15 ಕಿಲೋಮೀಟರ್ ಉದ್ದವಿದ್ದು, ಇದು ಕಾರ್ಯಾರಂಭ ಮಾಡಿದ ನಂತರ ಪ್ರತಿದಿನ ಸುಮಾರು 8 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗುವ ನಿರೀಕ್ಷೆಯಿದೆ. ಈ ಮಾರ್ಗದ ಉದ್ಘಾಟನೆಯು ಬೆಂಗಳೂರಿನ ಅತಿ ದೊಡ್ಡ ಸಂಚಾರ ದಟ್ಟಣೆಯ ಸಮಸ್ಯೆಗಳಲ್ಲಿ ಒಂದಾದ ಸಿಲ್ಕ್ ಬೋರ್ಡ್ ಜಂಕ್ಷನ್ ದಟ್ಟಣೆಗೆ ಬಹುಮಟ್ಟಿಗೆ ಪರಿಹಾರ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ನಗರದ ಮೂಲಸೌಕರ್ಯಕ್ಕೆ ಆದ್ಯತೆ ನೀಡುತ್ತಿರುವ ಪ್ರಧಾನಿ ಮೋದಿಯವರಿಗೆ ಸಂಸದ ತೇಜಸ್ವಿ ಸೂರ್ಯ ಅವರು ಧನ್ಯವಾದ ತಿಳಿಸಿದ್ದಾರೆ.
ಈ ಮಾರ್ಗದಲ್ಲಿ ಸಂಚಾರ ಆರಂಭಿಸಲು ಮೆಟ್ರೋ ರೈಲು ಸುರಕ್ಷತಾ ಆಯೋಗ (CMRS) ಈಗಾಗಲೇ ಅನುಮತಿ ನೀಡಿದೆ. ದಕ್ಷಿಣ ವೃತ್ತದ ಆಯುಕ್ತ ಅನಂತ್ ಮಧುಕರ್ ಚೌಧರಿ ನೇತೃತ್ವದ ತಂಡವು ಜುಲೈ 22 ರಿಂದ 25ರ ವರೆಗೆ ಮಾರ್ಗದ ಸಂಪೂರ್ಣ ತಪಾಸಣೆ ಮತ್ತು ವಿವಿಧ ಪರೀಕ್ಷೆಗಳನ್ನು ನಡೆಸಿ, ಸುರಕ್ಷತೆಯ ಬಗ್ಗೆ ಖಚಿತಪಡಿಸಿಕೊಂಡಿದೆ. ಮಾರ್ಗದ ಕಾರ್ಯಾಚರಣೆಗಾಗಿ ಈಗಾಗಲೇ ಮೂರು ರೈಲುಗಳು ಬೆಂಗಳೂರನ್ನು ತಲುಪಿವೆ ಮತ್ತು ನಾಲ್ಕನೇ ರೈಲು ಉದ್ಘಾಟನಾ ದಿನಾಂಕದೊಳಗೆ ನಗರವನ್ನು ತಲುಪುವ ನಿರೀಕ್ಷೆಯಿದೆ.