ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ | ನಾವು ಬೀದಿಗೆ ಇಳಿದರೆ ಮನೆ ಖಾಲಿ ಮಾಡುತ್ತೀರಿ ಹುಷಾರ್; ಪ್ರಿಯಾಂಕ್ ಖರ್ಗೆ ವಾರ್ನಿಂಗ್
ನಿಮ್ಮ ತಂದೆ ಏನು ಮಾಡಿದ್ದಾರೆ ಎಂಬುದು ಜಗತ್ತಿಗೆ ಗೊತ್ತು. ಪೂಜ್ಯ ತಂದೆ ಅಂದ ಮಾತ್ರಕ್ಕೆ ಪೂಜ್ಯತೆ ಬರುವುದಿಲ್ಲ. ನಾವು ಬೀದಿಗೆ ಇಳಿದರೆ ನೀವು ಮನೆ ಖಾಲಿ ಮಾಡಬೇಕಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಎಚ್ಚರಿಸಿದ್ದಾರೆ.
ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಬೀದಿಗಿಳಿದಿದೆ.
ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಶನಿವಾರ ಕಲಬುರಗಿಯ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ನಾಯಕರ ಈ ಧೋರಣೆಗೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಬೀದಿಗೆ ಇಳಿದರೆ ಮನೆ ಖಾಲಿ ಮಾಡುತ್ತೀರಿ
ಬಿಜೆಪಿ ನಾಯಕರ ಕೊಲೆಗೆ ಸುಪಾರಿ ನೀಡಲಾಗಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ವಿಜಯೇಂದ್ರ ಅವರದ್ದು ಅತಿ ಆಯಿತು. ನಾವು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವ ಕೊಡುತ್ತಿದ್ದೇವೆ ಎಂದು ಬಾಯಿಗೆ ಬಂದಂತೆ ಮಾತನಾಡಿದರೆ ಪರಿಣಾಮ ಸರಿ ಇರುವುದಿಲ್ಲ. ನಿಮ್ಮ ತಂದೆ ಏನು ಮಾಡಿದ್ದಾರೆ ಎಂಬುದು ಜಗತ್ತಿಗೆ ಗೊತ್ತು. ಪೂಜ್ಯ ತಂದೆ ಅಂದ ಮಾತ್ರಕ್ಕೆ ಪೂಜ್ಯತೆ ಬರುವುದಿಲ್ಲ. ನಾವು ಬುದ್ದ, ಬಸವ, ಅಂಬೇಡ್ಕರ್ ಮೇಲೆ ನಂಬಿಕೆ ಇಟ್ಟವರು. ನಾವು ಬೀದಿಗೆ ಇಳಿದರೆ ನೀವು ಮನೆ ಖಾಲಿ ಮಾಡಬೇಕಾಗುತ್ತದೆ. ನಮ್ಮ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಂಡು ಮಾತಾಡಬೇಕು ಎಂದು ಕಿಡಿಕಾರಿದ್ದಾರೆ.
ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿಯವರ ತಾಳಕ್ಕೆ ತಕ್ಕಂತೆ ಕುಣಿಯಲು ಆಗುವುದಿಲ್ಲ. ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ಮಾಡಿಸುವುದು ಸರ್ಕಾರದ ಜವಾಬ್ದಾರಿ. ಆ ಕುಟುಂಬಕ್ಕೆ ನಾನು ಭರವಸೆ ನೀಡಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸರ್ಕಾರದ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ
ಬಿಜೆಪಿಯವರಿಗೆ ಸಿಬಿಐ ಮೇಲೆ ಪ್ರೀತಿ ಹೆಚ್ಚಾಗಿದೆ. ಆದರೆ, ನಾವು ಬಿಜೆಪಿಯವರ ಸ್ಕ್ರಿಫ್ಟ್ ನಂತೆ ನಟನೆ ಮಾಡುವುದಿಲ್ಲ. ಒಂದು ಜೀವ ಹೋಗಿದೆ. ಅದಕ್ಕೆ ನ್ಯಾಯ ಕೊಡಿಸುವುದು ನಮ್ಮ ಜವಾಬ್ದಾರಿ. ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಹೇಳಿಕೆ ನೀಡುವಂತೆ ಸಚಿನ್ ಕುಟುಂಬದವರಿಗೆ ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯವರಿಗೆ ಹೆಣ ಬಿದ್ದರೆ ಸಾಕು, ಸಂಭ್ರಮ ಹೆಚ್ಚಾಗುತ್ತದೆ. ಆದರೆ, ನಾವು ಹಾಗಲ್ಲ. ಸಚಿನ್ ಕುಟುಂಬಕ್ಕೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ. ಬಿಜೆಪಿ ಅವಧಿಯಲ್ಲಿ ಗಂಗಾ ಕಲ್ಯಾಣ, ಪಿಎಸ್ಐ ಹಗರಣ ಸೇರಿದಂತೆ ಸಾಕಷ್ಟು ಹಗರಣಗಳು ನಡೆದಿವೆ. ಹಾಗಾದರೆ, ಎಷ್ಟು ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದಾರೆ ಎಂದು ಪ್ರಿಯಾಂಕ್ ಪ್ರಶ್ನಿಸಿದ್ದಾರೆ.
ವಿರೋಧ ಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಪ್ರತಿಭಟನೆಗೆ ಬರುವಂತೆ ಸಚಿನ್ ಕುಟುಂಬವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ ಕುಟುಂಬಕ್ಕೆ ಬಿಜೆಪಿಯವರು ನೆರವಾಗಿದ್ದಾರಾ ಎಂದು ಕಿಡಿಕಾರಿದ್ದಾರೆ.
ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಯತ್ನ
ಈ ಮಧ್ಯೆ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕಲಬುರಗಿಯ ಪ್ರಿಯಾಂಕ್ ಖರ್ಗೆ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಉಮೇಶ್ ಜಾಧವ್, ಎನ್.ಮಹೇಶ್ ಸೇರಿದಂತೆ ಹಲವು ನಾಯಕರು ಹಾಗೂ ಕಾರ್ಯಕರ್ತರು ಕಲಬುರಗಿಯ ಜಗತ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಸಾಗಿ ಮೂಲಕ ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಆದರೆ, ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಬಳಿ ಬರುತ್ತಿದ್ದಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ನೇತೃತ್ವದಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ನಾಯಕರ ಮಧ್ಯೆ ತಳ್ಳಾಟ, ನೂಕಾಟವೂ ನಡೆಯಿತು.
ಬಿಜೆಪಿ ನಾಯಕರಿಗೆ ಎಳನೀರು, ಕಾಫಿ ವ್ಯವಸ್ಥೆ
ತಮ್ಮ ಮನೆಗೆ ಮುತ್ತಿಗೆ ಹಾಕಲು ಬರುವ ಬಿಜೆಪಿ ನಾಯಕರಿಗೆ ಎಳನೀರು, ಕಾಫಿ ಹಾಗೂ ಟೀ ವ್ಯವಸ್ಥೆ ಮಾಡುವುದಾಗಿ ಹೇಳಿದ್ದ ಪ್ರಿಯಾಂಕ್ ಖರ್ಗೆ ಅವರು ಅಂತೆಯೇ ಆತಿಥ್ಯ ನೀಡಲು ಸಿದ್ಧತೆ ಮಾಡಿಕೊಂಡಿದ್ದರು.
ಮಂಡ್ಯದಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ
ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದರೆ ಇತ್ತ ಮಂಡ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಿ.ಟಿ.ರವಿ ಹಾಗೂ ಇತರೆ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಮಸಿ ಬಳಿದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ನಾಯಕರು ಸಚಿನ್ ಆತ್ಮಹತ್ಯೆ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಹಸ್ತಕ್ಷೇಪ ಇಲ್ಲದಿದ್ದರೂ ರಾಜೀನಾಮೆ ಒತ್ತಾಯಿಸುವ ಮೂಲಕ ನೀಚ ರಾಜಕಾರಣಕ್ಕೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.