ಕೆಎಸ್‌ಪಿಸಿಬಿ ವಿರುದ್ಧ ಪ್ರತಿಭಟನೆ | ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ ಎಂದ ಸಚಿವ ಖಂಡ್ರೆ
x

ಕೆಎಸ್‌ಪಿಸಿಬಿ ವಿರುದ್ಧ ಪ್ರತಿಭಟನೆ | ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ ಎಂದ ಸಚಿವ ಖಂಡ್ರೆ


ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೇರಿದ ಸಿದ್ದಸಿರಿ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಾರ್ಯಾಚರಣೆಗೆ ಅನುಮತಿ ಪತ್ರ ನೀಡುವಂತೆ ಸೂಚಿಸಿರುವ ಹೈಕೋರ್ಟ್ ತೀರ್ಪನ್ನು ಪರಿಶೀಲಿಸಿ, ಕಾಲಮಿತಿಯೊಳಗೆ ಕ್ರಮವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಕೋರ್ಟ್ ಆದೇಶ ನೀಡಿದರೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ) ಅನುಮತಿಗೆ ಕ್ರಮ ವಹಿಸದ ನಿರ್ಧಾರ ಖಂಡಿಸಿ ಸಕ್ಕರೆ ಕಾರ್ಖಾನೆ ಮಾಲೀಕರೂ ಆಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲಿನ್ಯ ನಿಯಂತ್ರಣ ಮಂಡಳಿಯ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಧರಣಿ ನಡೆಸಿದ್ದರು. ಮಂಗಳವಾರ ರಾತ್ರಿಪೂರ್ತಿ ಪಿಸಿಬಿ ಕಚೇರಿಯಲ್ಲೇ ಬೀಡುಬಿಟ್ಟಿದ್ದರು.

ಈ ಬಗ್ಗೆ ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಖಂಡ್ರೆ, ʻʻಸಿದ್ದಸಿರಿ ಕಾರ್ಖಾನೆ ಈ ಹಿಂದೆ ಅನುಮತಿ ಇಲ್ಲದೆ ಬಾಯ್ಲರ್ ಸ್ಥಾಪನೆ ಮಾಡಿದ್ದು, ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಹಂತದಲ್ಲಿದ್ದರೂ ನಿಯಮ ಉಲ್ಲಂಘಿಸಿ ಲಕ್ಷಾಂತರ ಟನ್ ಕಬ್ಬು ಅರೆದಿತ್ತು. ಹೀಗಾಗಿ ಮಂಡಳಿ ನಿಯಮಾನುಸಾರ ಕ್ರಮ ವಹಿಸಿತ್ತುʼʼ ಎಂದರು.

ʻʻಈ ಎಥನಾಲ್ ಕಾರ್ಖಾನೆ ಪೂರ್ವಾನುಮತಿ ಇಲ್ಲದೆ ತನ್ನ ಸಾಮರ್ಥ್ಯ ವಿಸ್ತರಣೆ ಮಾಡಿ ಕಾನೂನು ಬಾಹಿರವಾಗಿ ಕಾರ್ಯಾಚರಣೆ ನಡೆಸಿರುವ ಹಿನ್ನೆಲೆಯಲ್ಲಿ ಕೇಂದ್ರ ಪರಿಸರ ಇಲಾಖೆಯೇ 1.58 ಕೋಟಿ ದಂಡ ವಿಧಿಸಿತ್ತು, ದಂಡ ಕಟ್ಟಿದ ಬಳಿಕವೂ ಘಟಕ ಸ್ಥಾಪನೆಗೆ ಅನುಮೋದನೆ ಪಡೆಯದೆ ಮತ್ತೆ ಕಾರ್ಯಾಚರಣೆ ಮಾಡಿದ ಸಂಸ್ಥೆಯ ವಿರುದ್ಧ ಕ್ರಮ ಕೈಗೊಂಡಿದ್ದರಲ್ಲಿ ತಪ್ಪೇನು?ʼʼ ಎಂದು ಪ್ರಶ್ನಿಸಿದರು.

ʻʻಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶವಾಗಲಿ, ದ್ವೇಷವಾಗಲಿ ಇಲ್ಲ. ಪೂರ್ವಾನುಮತಿ ಇಲ್ಲದೆ ಕಾರ್ಖಾನೆ ಮತ್ತೆ ಲಕ್ಷಾಂತರ ಟನ್ ಕಬ್ಬು ನುರಿಸಿ ಎಥನಾಲ್ ಉತ್ಪಾದಿಸಿರುವುದೇ ಅಲ್ಲದೆ, ನದಿಗೆ ತ್ಯಾಜ್ಯ ಹರಿಯಬಿಟ್ಟಿರುವ ಆರೋಪವೂ ಇದೆ. ಇದು ಜಲ ಕಾಯಿದೆ ಮತ್ತು ಪರಿಸರ ಸಂರಕ್ಷಣಾ ಕಾಯಿದೆಯ ಉಲ್ಲಂಘನೆಯಾಗುತ್ತದೆʼʼ ಎಂದರು.

ʻʻಯತ್ನಾಳ್ ಅವರು ಮಂಗಳವಾರವಷ್ಟೇ ಕೋರ್ಟ್ ಆದೇಶದ ದೃಢೀಕೃತ ಪ್ರತಿ ಸಲ್ಲಿಸಿದ್ದಾರೆ. ಮಂಡಳಿ, ಕಾನೂನು ವಿಭಾಗದೊಂದಿಗೆ ಚರ್ಚಿಸಿ ಮುಂದಿನ ಕ್ರಮ ವಹಿಸುತ್ತದೆ. ನ್ಯಾಯಾಲಯ 4 ವಾರ ಕಾಲಾವಕಾಶ ನೀಡಿರುವಾಗ ಯತ್ನಾಳ್ ಅವರು ಒಂದೇ ದಿನದಲ್ಲಿ ಅನುಮತಿ ಪತ್ರ ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಮಂಡಳಿಯ ಅಧಿಕಾರಿಗಳಿಗೆ ಕೆಲಸ ಮಾಡಲು ಕಾಲಾವಕಾಶ ನೀಡಬೇಕುʼʼ ಎಂದು ಹೇಳಿದರು.

Read More
Next Story