
ಕೋವಿಡ್ ಅವಧಿಯಲ್ಲಿ ಪ್ರತಿಭಟನೆ | ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರಿಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್
2022 ರಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ರದ್ದುಪಡಿಸುವಂತೆ ಕೋರಿ ಸಿಎಂ ಹಾಗೂ ಇತರ ನಾಯಕರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಕೋವಿಡ್ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಇತರ ನಾಯಕರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
2022 ರಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ರದ್ದುಪಡಿಸುವಂತೆ ಕೋರಿ ಸಿಎಂ ಹಾಗೂ ಇತರ ನಾಯಕರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಬುಧವಾರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು. ಇದರಿಂದ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಪ್ರಕರಣ ಏನು?
ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ 2022ರಲ್ಲಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಇದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಸಮಿತಿ ವತಿಯಿಂದ 2022ರ ಜೂನ್‌ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಕೋವಿಡ್ ನಿಯಮ ಉಲ್ಲಂಘಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಇನ್ನು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ 2022ರ ಏ.14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಪ್ರತಿಭಟನೆ ಸಂಬಂಧ ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು.