
ಸಿದ್ದರಾಮಯ್ಯ
ಪರಿಹಾರ ಸಾವಿಗೆ ಸಮಾನವಲ್ಲ: ಸಾಂತ್ವನ ಮುಖ್ಯ: ಸಿಎಂ ಸಿದ್ದರಾಮಯ್ಯ
ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ.
ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದರು. ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಹಾಸನ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದರು.
ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ
ಸತ್ತವರು ಹೆಚ್ಚಾಗಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳಿದ್ದರು ಹಾಗಾಗಿ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸರ್ಕಾರ ಐದು ಲಕ್ಷ ಪರಿಹಾರ ನೀಡಿದೆ. ಮೃತರ ಕುಟುಂಬದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ ಎಂದರು.
ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ವಿಳಂಬವಾಗುತ್ತಿಲ್ಲ.ಎಸ್ ಐ ಟಿ ತನಿಖೆ ಮಾಡುತ್ತಿದ್ದು ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಾಗೆಂದು ಅನಗತ್ಯವಾಗಿ ವಿಳಂಬ ಮಾಡುವಂತಿಲ್ಲ. ನನಗೆ ತಿಳಿದಂತೆ ವಿಳಂಬವಾಗುತ್ತಿಲ್ಲ ಎಂದು ಹೇಳಿದರು.
ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ
ದಸರಾ ಉದ್ಘಾಟಕರ ವಿಚಾರದಲ್ಲಿ ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಬಗ್ಗೆ ಮಾತನಾಡಿ ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದರು.