
ಅತ್ಯಾಚಾರ, ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್
ನೊಂದ ಯುವತಿ ಜೂನ್ 24ರ ರಾತ್ರಿ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಾದ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಶ್ರೀಕೃಷ್ಣ ರಾವ್ ತಲೆಮರೆಸಿಕೊಂಡಿದ್ದ.
ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭಿಣಿಯಾದ ಬಳಿಕ ಮದುವೆಗೆ ನಿರಾಕರಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ. ರಾವ್ ನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರನಾಗಿರುವ ಶ್ರೀಕೃಷ್ಣನನ್ನು ಮೈಸೂರು ಸಮೀಪದಲ್ಲಿ ಬಂಧಿಸಲಾಗಿದ್ದು, ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಯುವತಿ ಮತ್ತು ಆರೋಪಿ ಶ್ರೀಕೃಷ್ಣ ಪುತ್ತೂರಿನಲ್ಲಿ ಹೈಸ್ಕೂಲ್ನಲ್ಲಿ ಓದುವಾಗ ಪರಸ್ಪರ ಪ್ರೀತಿಸುತ್ತಿದ್ದರು. ನಂತರ, ಇಬ್ಬರೂ ಮಂಗಳೂರಿನ ಖಾಸಗಿ ಕಾಲೇಜಿಗೆ ಸೇರಿಕೊಂಡಿದ್ದರು. 2024ರ ಅಕ್ಟೋಬರ್ 11ರಂದು ಶ್ರೀಕೃಷ್ಣ ತನ್ನ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಯುವತಿಯನ್ನು ಮನೆಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಂತರ, 2025ರ ಜನವರಿ ತಿಂಗಳಿನಲ್ಲಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದ. ಇದರಿಂದ ತಾನು ಗರ್ಭಿಣಿಯಾಗಿರುವ ವಿಚಾರವನ್ನು ಯುವತಿ ಕೃಷ್ಣ ರಾವ್ಗೆ ತಿಳಿಸಿದಾಗ, ಆತ ಮದುವೆಯಾಗಲು ನಿರಾಕರಿಸಿದ್ದಾನೆ.
ಈ ಘಟನೆಯಿಂದ ತೀವ್ರವಾಗಿ ನೊಂದ ಯುವತಿ ಜೂನ್ 24ರ ರಾತ್ರಿ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಾದ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಶ್ರೀಕೃಷ್ಣ ರಾವ್ ತಲೆಮರೆಸಿಕೊಂಡಿದ್ದ. ಪುತ್ತೂರು ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ತಂದೆಯ ಮುಚ್ಚಳಿಕೆ ಪತ್ರ ಮತ್ತು ಬಂಧನ
ಆರೋಪಿ ಶ್ರೀಕೃಷ್ಣ ಜೆ. ರಾವ್ನ ತಂದೆ ಪಿ.ಜಿ. ಜಗನ್ನಿವಾಸ್ ರಾವ್ ಅವರು ಈ ಹಿಂದೆ, ತಮ್ಮ ಪುತ್ರನಿಗೆ ಜೂನ್ 23ಕ್ಕೆ 21 ವರ್ಷ ತುಂಬಿದ ಬಳಿಕ ಯುವತಿಯನ್ನು ವಿವಾಹ ಮಾಡಿಕೊಡುವುದಾಗಿ ಠಾಣೆಯಲ್ಲಿ ಮುಚ್ಚಳಿಕೆ ಬರೆದು ಕೊಟ್ಟಿದ್ದರು. ಒಂದು ವೇಳೆ ಮಗ ವಿವಾಹಕ್ಕೆ ಒಪ್ಪದಿದ್ದರೆ, ಕಾನೂನು ಕ್ರಮ ಕೈಗೊಳ್ಳಬಹುದೆಂದೂ ತಿಳಿಸಿದ್ದರು. ಆದರೆ, ನಂತರ ಯುವಕ ಸಂತ್ರಸ್ತೆಯನ್ನು ವಿವಾಹವಾಗಲು ಒಪ್ಪದ ಹಿನ್ನೆಲೆಯಲ್ಲಿ ಜುಲೈ 24ರಂದು ಸಂತ್ರಸ್ತ ಯುವತಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.