ರಾಜ್ಯಾದ್ಯಂತ ಐದು ದಿನ ಭಾರೀ ಮಳೆ ಸಾಧ್ಯತೆ: ಕೆಲವೆಡೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
x

ರಾಜ್ಯಾದ್ಯಂತ ಐದು ದಿನ ಭಾರೀ ಮಳೆ ಸಾಧ್ಯತೆ: ಕೆಲವೆಡೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ


ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯದ್ಯಾಂತ ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಜು.9ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಿರುಗಾಳಿ ಕೂಡ ತೀವ್ರಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಜು.8ರಿಂದ ಜು.12ರವರೆಗೆ ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೂಡ ಭಾರೀ ಮಳೆ ಮತ್ತು ನಿರಂತರ ಗಾಳಿ (30-40 ಕಿ.ಮೀ ವೇಗದ) ಸಾಧ್ಯತೆಯಿದೆ.

ಕಳೆದೊಂದು ವಾರದಿಂದ ಕರಾವಳಿಯಲ್ಲಿ ಮಳೆ ಸುರಿಯುತ್ತಿದೆ. ಅನೇಕ ಕಡೆ ಪ್ರವಾಹ ಅವಾಂತರ ಕೂಡ ಸೃಷ್ಟಿಯಾಗಿದೆ. ಈ ಮಧ್ಯ ಮತ್ತೆ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಉಡುಪಿಯಲ್ಲಿ ಜು.9 ರಂದು ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಂಜಿನಿಯರಿಂಗ್ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಐಟಿಐ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ತರಗತಿಗಳು ಎಂದಿನಂತೆ ನಡೆಯಲಿವೆ.

ಬೆಂಗಳೂರಿನಲ್ಲೂ ಜೋರಾದ ಮಳೆ

ಬೆಂಗಳೂರಿ ಮಹಾನಗರ ವ್ಯಾಪ್ತಿಯಲ್ಲೂ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಕಾರ್ಪೊರೇಷನ್, ಶಾಂತಿನಗರ, ವಿಲ್ಸನ್ ಗಾರ್ಡನ್, ಲಾಲ್‌ಬಾಗ್, ಬಸವನಗುಡಿ, ಕಬ್ಬನ್​ಪಾರ್ಕ್​, ವಿ.ವಿ.ಪುರಂ, ಬನಶಂಕರಿ, ಚಾಮರಾಜಪೇಟೆ ಸುತ್ತಮುತ್ತ ಸೇರಿದಂತೆ ಹಲವೆಡೆ ಮಳೆ ಸುರಿದಿದೆ. ಜೋರು ಮಳೆ ಹಿನ್ನೆಲೆ ವಾಹನಗಳ ಸವಾರರು ಹೈರಾಣಾಗಿದ್ದಾರೆ.

ಉತ್ತರ ಒಳನಾಡಿನ ಬೆಳಗಾವಿಗೆ ಇಂದಿನಿಂದ ಜುಲೈ 10ರ ವರೆಗೆ ಯಲ್ಲೋ ಅಲರ್ಟ್ ನೀಡಿದ್ದು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ನೀಡಿದ್ದು ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ 5 ದಿನದ ಮಳೆಯ ಅಲರ್ಟ್ ನೀಡಲಾಗಿದೆ.

ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳು ಸೇರಿ ಹಲವೆಡೆ ಗಾಳಿಯ ವೇಗ (30-40 ಕಿಮೀ) ಸಹಿತ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯು ಸಂಭವಿಸುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯು ಮಳೆ ಮುನ್ಸೂಚನೆ ನೀಡಿದೆ. ಜು.13ರ ನಂತರ ಮಳೆ ಪ್ರಮಾಣ ತಗ್ಗಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More
Next Story