
ಕಾಗವಾಡ ಶಾಸಕ ರಾಜು ಕಾಗೆ
ಬಂಡಾಯಕ್ಕೆ ''ಹ್ಯಾಂಡ್'' ಬ್ರೇಕ್: ರಾಜಣ್ಣ ಬಳಿಕ ರಾಜು ಕಾಗೆಗೆ ಶಾಕ್ ಕೊಟ್ಟ ಹೈಕಮಾಂಡ್!
ರಾಜು ಕಾಗೆ ಅವರ ಸ್ಥಾನಕ್ಕೆ ಅರುಣ್ ಪಾಟೀಲ್ ಅವರನ್ನು ಹೊಸ ಅಧ್ಯಕ್ಷರನ್ನಾಗಿ ನೇಮಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಿದ್ದರಾಮಯ್ಯ ಅವರಿಗೆ ಅಂತಿಮ ಪಟ್ಟಿಯನ್ನು ಕಳುಹಿಸಿದ್ದಾರೆ.
ಸರ್ಕಾರಕ್ಕೆ ಮುಜುಗರ ತರುವಂತಹ ಹೇಳಿಕೆ ನೀಡಿದ್ದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ (NWKRTC) ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಲಾಗಿದೆ. ಈ ಹಿಂದೆ ಇದೇ ಕಾರಣಕ್ಕೆ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ಕೈಬಿಡಲಾಗಿತ್ತು. ಅದರ ಬೆನ್ನಲ್ಲೇ ಈ ಕಠಿಣ ಕ್ರಮ ಜರುಗಿಸಲಾಗಿದೆ.ಈ ಮೂಲಕ, ಪಕ್ಷದ ಅಥವಾ ಸರ್ಕಾರದ ವಿರುದ್ಧ ಸಾರ್ವಜನಿಕವಾಗಿ ಮಾತನಾಡುವವರನ್ನು ಸಹಿಸುವುದಿಲ್ಲ ಎಂಬ ಖಡಕ್ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ರವಾನಿಸಿದೆ.
ರಾಜು ಕಾಗೆ ಸ್ಥಾನ ಕಳೆದುಕೊಂಡಿದ್ದು ಯಾಕೆ?
ಕಾಗವಾಡ ಶಾಸಕ ರಾಜು ಕಾಗೆ ಅವರು ಇತ್ತೀಚೆಗೆ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. "ನನ್ನ ಕ್ಷೇತ್ರಕ್ಕೆ 25 ಕೋಟಿ ರೂಪಾಯಿ ವಿಶೇಷ ಅನುದಾನ ಬಿಡುಗಡೆಯಾದರೂ, ಎರಡು ವರ್ಷಗಳಿಂದ ಕಾಮಗಾರಿಗಳು ಆರಂಭವಾಗಿಲ್ಲ. ಈ ಸಮಸ್ಯೆ ಬಗೆಹರಿಯದಿದ್ದರೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಎಚ್ಚರಿಕೆ ನೀಡಿದ್ದರು.
ವಸತಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ್ದ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರಂತೆಯೇ ತಮಗೂ ಅನ್ಯಾಯವಾಗಿದೆ ಎಂದು ಅವರು ಹೇಳಿಕೊಂಡಿದ್ದರು. ಜೂನ್ 23ರಂದು ನೀಡಿದ ಈ ಹೇಳಿಕೆಯು ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿತ್ತು. ತಕ್ಷಣವೇ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜು ಕಾಗೆ ಅವರನ್ನು ಭೇಟಿಯಾಗಿ ಮನವೊಲಿಸಿ, ಇನ್ನು ಮುಂದೆ ಸಾರ್ವಜನಿಕ ಹೇಳಿಕೆ ನೀಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.
ಸುರ್ಜೇವಾಲಾ ಅವರ ಎಚ್ಚರಿಕೆಯ ನಂತರ ಕಾಗೆ ಮೌನ ವಹಿಸಿದ್ದರೂ, ಇದೀಗ ಹೈಕಮಾಂಡ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದೆ. ಅವರ ಸ್ಥಾನಕ್ಕೆ ಅರುಣ್ ಪಾಟೀಲ್ ಅವರನ್ನು ನೇಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ.
ರಾಜಣ್ಣ ಮೇಲೂ ನಡೆದಿತ್ತು ಇದೇ ಕ್ರಮ
ಈ ಹಿಂದೆ, ಸಹಕಾರ ಸಚಿವರಾಗಿದ್ದ ಕೆ.ಎನ್. ರಾಜಣ್ಣ ಅವರನ್ನೂ ಇದೇ ರೀತಿಯ ಕಾರಣಕ್ಕಾಗಿ ಸಂಪುಟದಿಂದ ಕೈಬಿಡಲಾಗಿತ್ತು. 'ಮಹದೇವಪುರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಾಗ, ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿತ್ತು' ಎಂದು ರಾಜಣ್ಣ ನೀಡಿದ್ದ ಹೇಳಿಕೆಯು, ರಾಷ್ಟ್ರಮಟ್ಟದಲ್ಲಿ ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿದ್ದ ಹೋರಾಟಕ್ಕೆ ತೀವ್ರ ಹಿನ್ನಡೆ ಉಂಟುಮಾಡಿತ್ತು. ಈ ಹೇಳಿಕೆಯು ವಿರೋಧ ಪಕ್ಷಗಳಿಗೆ ಪ್ರಬಲ ಅಸ್ತ್ರವಾಗಿ ಪರಿಣಮಿಸಿದ್ದರಿಂದ, ಹಾನಿ ನಿಯಂತ್ರಣಕ್ಕೆ ಇಳಿದ ಹೈಕಮಾಂಡ್, ರಾಜಣ್ಣ ಅವರನ್ನು ಸಂಪುಟದಿಂದಲೇ ವಜಾಗೊಳಿಸುವ ಕಠಿಣ ನಿರ್ಧಾರ ಕೈಗೊಂಡಿತ್ತು. ಸಚಿವ ಸ್ಥಾನ ಕಳೆದುಕೊಂಡ ನಂತರ ರಾಜಣ್ಣ ಅವರು ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.