ರಾಮನಗರ ಜಿಲ್ಲೆಯಿನ್ನು ಬೆಂಗಳೂರು ದಕ್ಷಿಣ: ಸಂಪುಟ ಸಭೆ ಸಹಮತಿಯಷ್ಟೇ ಬಾಕಿ
x

ರಾಮನಗರ ಜಿಲ್ಲೆಯಿನ್ನು ಬೆಂಗಳೂರು ದಕ್ಷಿಣ: ಸಂಪುಟ ಸಭೆ ಸಹಮತಿಯಷ್ಟೇ ಬಾಕಿ

ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮುಂದಾಗಿದ್ದಾರೆ. ಇದರ ಮೂಲಕ ಈ ಹಿಂದೆ ರಾಮನಗರ ಹೆಸರು ಬದಲಾವಣೆ ಸಂಬಂಧ ರಾಜಕೀಯ ಮೇಲಾಟ ಮತ್ತೆ ಆರಂಭವಾಗಿದೆ. ರಿಯಲ್‌ ಎಸ್ಟೇಟ್‌ ಮೌಲ್ಯ ಹೆಚ್ಚುತ್ತದೆ ಎಂಬ ಕಾರಣಕ್ಕೆ ಜಿಲ್ಲೆಯ ಹೆಸರು ಬದಲಾಯಿಸುವುದನ್ನು ವಿರೋಧ ಪಕ್ಷ ಬಿಜೆಪಿ ಹೀಗಳೆದಿದೆ.


ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮುಂದಾಗಿದ್ದಾರೆ. ಇದರ ಮೂಲಕ ಈ ಹಿಂದೆ ರಾಮನಗರ ಹೆಸರು ಬದಲಾವಣೆ ಸಂಬಂಧ ರಾಜಕೀಯ ಮೇಲಾಟ ಮತ್ತೆ ಆರಂಭವಾಗಿದೆ. ರಿಯಲ್‌ ಎಸ್ಟೇಟ್‌ ಮೌಲ್ಯ ಹೆಚ್ಚುತ್ತದೆ ಎಂಬ ಕಾರಣಕ್ಕೆ ಜಿಲ್ಲೆಯ ಹೆಸರು ಬದಲಾಯಿಸುವುದನ್ನು ವಿರೋಧ ಪಕ್ಷ ಬಿಜೆಪಿ ಹೀಗಳೆದಿದೆ.

ಆದರೆ, ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮಾಡುವುದರಿಂದ ಮುಂದೆ ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ಮೈಸೂರುವರೆಗೂ ಅಭಿವೃದ್ಧಿ ಸಾಧಿಸಲು, ಕೈಗಾರಿಕೆಗಳ ಸ್ಥಾಪನೆಗೆ ಆಹ್ವಾನಿಸಲು, ಜತೆಗೆ ಆಸ್ತಿ ಮೌಲ್ಯ ಹೆಚ್ಚಳಕ್ಕೂ ನೆರವಾಗುತ್ತದೆ. ಬೆಂಗಳೂರಿನ ಒಂದು ದಿಕ್ಕಿನಲ್ಲಿ ಆಂಧ್ರ ಪ್ರದೇಶ, ಮತ್ತೊಂದು ದಿಕ್ಕಿನಲ್ಲಿ ತಮಿಳುನಾಡು ರಾಜ್ಯದ ಗಡಿ ಬರುತ್ತದೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿ ವಿಸ್ತರಣೆಗೆ ನಮಗೆ ಉಳಿದಿರುವುದು ತುಮಕೂರು ಹಾಗೂ ಈ ಭಾಗ ಮಾತ್ರ. ನಮ್ಮ ಹೆಸರನ್ನು ನಾವು ಉಳಿಸಿಕೊಳ್ಳುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಮ್ಮ ನಿಲುವಿಗೆ ಸಮರ್ಥನೆ ನೀಡಿದ್ದಾರೆ.

ಬಿಜೆಪಿ ಮುಖಂಡ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಅವರು ಪ್ರತಿಕ್ರಿಯೆ ನೀಡಿ ರಿಯಲ್‌ ಎಸ್ಟೇಟ್‌ಗಾಗಿ ಹೆಸರು ಬದಲಿಸುವುದು ಸರಿಯಲ್ಲ. "ಯರಾದದರೂ ಮೌಲ್ಯ ಕಟ್ಟುತ್ತಾರೆಂದರೆ ಅಪ್ಪ-ಅಮ್ಮನ ಹೆಸರು ಬದಲಾಯಿಸಲು ಸಾಧ್ಯವೆ?" ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಆದರೆ, ರಾಮನಗರ ಹೆಸರು ಬದಲಾವಣೆ ಸಂಬಂಧ ಡಿ.ಕೆ. ಶಿವಕುಮಾರ್‌ ಅವರ ಹೇಳಿಕೆಗೆ ಈಗ ಅಧಿಕೃತ ಚಾಲನೆ ದೊರೆತಿದೆ. ಮೊದಲ ಹಂತವಾಗಿ ಮಂಗಳವಾರ ಡಿ.ಕೆ. ಶಿವಕುಮಾರ್‌ ನೇತೃತ್ವದ ರಾಮನಗರ ಜಿಲ್ಲಾ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜಿಲ್ಲೆಯ ಹೆಸರು ಬದಲಾವಣೆಗೆ ಮನವಿ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹಮತ ವ್ಯಕ್ತಪಡಿಸಿರುವುದರಿಂದ ಮುಂದೆ ನಡೆಯಲಿರುವ ಸಚಿವ ಸಂಪುಟ ಸಭೆಯ ನಿರ್ಧಾರವಷ್ಟೇ ಬಾಕಿಯಿದೆ.

ಜಿಲ್ಲೆಯ ಹೆಸರು ಬದಲಾವಣೆಗೆ ಮನವಿ ಮಾಡಲಾಗಿದೆ ಎಂದು ಸಿಎಂ ಭೇಟಿಯ ಬಳಿಕ ಡಿಕೆ ಶಿವಕುಮಾರ್‌ ಅವರು ಮಾಧ್ಯಮಗಳಿಗೆ ತಿಳಿಸಿದ್ದು, ʻʻನನ್ನ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದೆವು. ನಾವೆಲ್ಲಾ ಬೆಂಗಳೂರಿನವರೇ. ಮೊದಲು ಬೆಂಗಳೂರು ಜಿಲ್ಲೆಗೆ ರಾಮನಗರ ಸೇರಿತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ. ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆʼʼ ಎಂದು ತಿಳಿಸಿದರು.

ʻʻಈ ವಿಚಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಆ ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾರ್ಟರ್ ಆಗಿರಲಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲ್ಲೂಕುಗಳು ಬೆಂಗಳೂರು ದಕ್ಷಿಣದ ವ್ಯಾಪ್ತಿಗೆ ಸೇರಲಿವೆ. ಈ ವಿಚಾರವನ್ನು ಕ್ಯಾಬಿನೆಟ್‌ನಲ್ಲಿಟ್ಟು ಚರ್ಚೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್ ನೇತೃತ್ವದ ರಾಮನಗರದ ನಿಯೋಗ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಯಿತು. ಕನಕಪುರ- ರಾಮನಗರ ಮೆಡಿಕಲ್ ಕಾಲೇಜು ಮತ್ತು ರಾಮನಗರ ಜಿಲ್ಲಾ ಹೆಸರು ಬದಲಾವಣೆ ಸೇರಿದಂತೆ ಕ್ಷೇತ್ರದ ಹಲವು ವಿಚಾರಗಳ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಲಾಯಿತು. ನಿಯೋಗದಲ್ಲಿ ಮಾಜಿ ಸಂಸದ ಡಿಕೆ ಸುರೇಶ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಉಪಸ್ಥಿತರಿದ್ದರು. ಬಹುತೇಕ ಜಿಲ್ಲೆಯ ಹೆಸರು ಬದಲಾವಣೆಗೆ ಸಿಎಂ ಅಧಿಕೃತ ಮುದ್ರೆ ಹಾಕುವ ಸಾಧ್ಯತೆ ಇದೆ.

“ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕುಗಳ ಭವಿಷ್ಯ ಹಾಗೂ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

"ಬೆಂಗಳೂರು ನಗರ ಸೇರಿದಂತೆ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ನಾವೆಲ್ಲರೂ ಮೂಲತಃ ಬೆಂಗಳೂರು ಜಿಲ್ಲೆಯವರು. ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಎಂದು ಹಿಂದೆ ವಿಭಾಗ ಮಾಡಲಾಯಿತು. ರಾಮನಗರವನ್ನು ಕೇಂದ್ರಾಡಳಿತವಾಗಿಟ್ಟುಕೊಂಡೇ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವುದು ಅಗತ್ಯ. ಬೆಂಗಳೂರು ಜಾಗತಿಕ ಮನ್ನಣೆ ಹೊಂದಿದ್ದು, ಈ ಜಿಲ್ಲೆಯ ಹೆಸರು ಉಳಿಸಿಕೊಳ್ಳಲು ನನ್ನ ಮುಖಂಡತ್ವದಲ್ಲಿ ಜಿಲ್ಲೆಯ ನಾಯಕರು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ," ಎಂದರು.

ಹೊಸ ಜಿಲ್ಲೆಗೆ ನೀಡಿರುವ ಪ್ರಸ್ತಾವನೆಯಲ್ಲಿ ಯಾವ ಯಾವ ಕ್ಷೇತ್ರಗಳು ಬರಲಿವೆ ಎಂಬ ಪ್ರಶ್ನೆಗೆ, “ನಾವು ಯಾವುದೇ ಹೊಸ ಜಿಲ್ಲೆ ಮಾಡುತ್ತಿಲ್ಲ. ಇರುವ ಜಿಲ್ಲೆ ಹಾಗೇ ಇರಲಿದೆ. ರಾಮನಗರ, ಚನ್ನಪಟ್ಟಣ, ಮಾಗಡಿ, ಹಾರೋಹಳ್ಳಿ, ಕನಕಪುರ - ಈ ಐದು ತಾಲೂಕುಗಳನ್ನು ಒಳಗೊಂಡು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕಾರಣ ಮುಂದಾಗಿದ್ದೇವೆ” ಎಂದು ತಿಳಿಸಿದರು.

ಹೆಸರು ಬದಲಾವಣೆ ರಾಜಕೀಯ

ಡಿಕೆ ಶಿವಕುಮಾರ್‌ ಅವರ ಈ ಹೆಸರು ಬದಲಾವಣೆಯ ಹಿಂದಿನ ಟಾರ್ಗೆಟ್ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಎಂಬುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ಮಾತು. ರಾಮನಗರ ಜಿಲ್ಲೆ ಈ ಹಿಂದೆ ಬೆಂಗಳೂರು ಗ್ರಾಮಾಂತರಕ್ಕೆ ಸೇರಿತ್ತು. ಆದರೆ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ 2007 ರಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಇದ್ದ ರಾಮನಗರವನ್ನು ಪ್ರತ್ಯೇಕ ಜಿಲ್ಲೆಯಾಗಿ ರಚನೆ ಮಾಡಿದ್ದರು.

ರಾಮನಗರ ಜಿಲ್ಲೆ ಘೋಷಣೆಗೂ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ. ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು.

1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಯಿತು. ನಂತರ 2007ರ ಸಾಲಿನಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು.

ಹೊಸ ಜಿಲ್ಲೆಯ ರಚನೆಯಾದಾಗ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ತಾಲ್ಲೂಕುಗಳಿದ್ದವು. ಇದೀಗ ಹಾರೋಹಳ್ಳಿ ತಾಲ್ಲೂಕು ರಚನೆಯಾಗಿದೆ. ಆದರೆ ಇದೀಗ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡುವ ಮೂಲಕ ಹೊಸತೊಂದು ರಾಜಕೀಯ ದಾಳವನ್ನು ಡಿಕೆ ಶಿವಕುಮಾರ್ ಉರುಳಿಸಿದ್ದಾರೆ.

ಹೆಸರು ಬದಲಾವಣೆಯಿಂದ ಜಿಲ್ಲೆಯ ಜನರಿಗೆ ಅನುಕೂಲ ಉದ್ದೇಶ ಇದ್ದರೂ ರಾಜಕೀಯವಾಗಿಯೂ ಇದು ಡಿಕೆಶಿಗೆ ಅನುಕೂಲಕರವಾಗಿದೆ. ಈ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರ ಹಿಂದಿನ ನಿರ್ಧಾರಕ್ಕೆ ಡಿಕೆಶಿ ಟಕ್ಕರ್ ಕೊಟ್ಟಿದ್ದಾರೆ. ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ಹೆಸರು ನಾಮಕರಣ ಮಾಡುವುದರಿಂದ ಜನರ ಒಲವು ಗಳಿಸುವುದರಲ್ಲಿ ಸಂಶಯವಿಲ್ಲ. ಇದು ಮುಂದಿನ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಾಭದಾಯಕವಾಗಿ ಪರಿಣಾಮಿಸುವ ಸಾಧ್ಯತೆ ದಟ್ಟವಾಗಿದೆ.

Read More
Next Story