
ಮಾಜಿ ಸಂಸದ ಪ್ರಜ್ವಲ್ ರೇವಣ್ಣ
ಅತ್ಯಾಚಾರ ಪ್ರಕರಣ | ಮಾಜಿ ಸಂಸದ ಪ್ರಜ್ವಲ್ ಜಾಮೀನು ಅರ್ಜಿ ಎರಡನೇ ಬಾರಿಯೂ ವಜಾ
ಆರೋಪಿ ಪ್ರಜ್ವಲ್ ರೇವಣ್ಣ ಜೂನ್‌ನಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಎರಡನೇ ಬಾರಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿತ್ತು.
ಮನೆ ಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡನೇ ಬಾರಿಯೂ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಆರೋಪಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿ ಕುರಿತು ವಾದ - ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಶುಕ್ರವಾರ ಆದೇಶ ಪ್ರಕಟಿಸಿದ್ದು ಜಾಮೀನು ನಿರೀಕ್ಷೆಯಲ್ಲಿದ್ದ ಆರೋಪಿಗೆ ನಿರಾಸೆಯಾಗಿದೆ.
ಇದಕ್ಕೂ ಮೊದಲು ಪ್ರಕರಣದ ಎ1 ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜನಪ್ರತಿನಿಧಿಗಳ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಎಲ್ಲೆಡೆ ಅರ್ಜಿ ವಜಾಗೊಂಡಿತ್ತು. ನಂತರ ಜೂನ್‌ನಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಎರಡನೇ ಬಾರಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿತ್ತು.
ಹೈಕೋರ್ಟ್ ಸಲಹೆ ಮೇರೆಗೆ ಎರಡನೇ ಬಾರಿ ವಿಚಾರಣಾ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಬಾರಿಯೂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದು ಆರೋಪಿ ಪ್ರಜ್ವಲ್ ರೇವಣ್ಣಗೆ ಜೈಲು ವಾಸದಿಂದ ಮುಕ್ತಿ ಸಿಕ್ಕಿಲ್ಲ.