ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ
x

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ


ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ಆರೋಪಿ, ಹಾಸನ ಜೆಡಿಎಸ್​​ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು, ಆದರೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು (ಜೂನ್ 26) ವಜಾ ಮಾಡಿ ಆದೇಶ ಹೊರಡಿಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶವನ್ನು ಕಾಯ್ದಿಸಿತ್ತು. ಇಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಪ್ರಕರಣದಲ್ಲಿ ಮಾಜಿ ಸಂಸದ ಎಸ್‌ಐಟಿ ಬಂಧನದಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಹೊಳೆನರಸೀಪುರ, ಸಿಐಡಿಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಮೊದಲ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಈ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರೂ ಆರೋಪಿಗಳಾಗಿದ್ದಾರೆ. ಈಗಾಗಲೇ ಹೆಚ್.ಡಿ.ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ. ಮೊದಲು ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿತ್ತು. ನಂತರ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು.

ಮೊನ್ನೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಪರಪ್ಪನ ಅಗ್ರಹಾರ ಜೈಲಿನದ್ದ ಪ್ರಜ್ವಲ್​ನನ್ನು ಮೂರನೇ ಪ್ರಕರಣದಲ್ಲಿ ಎಸ್​ಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಅಲ್ಲದೇ ಇಂದು (ಬುಧವಾರ) ಪ್ರಜ್ವಲ್​ನನ್ನು ಹೊಳೆನರಸೀಪುರಕ್ಕೆ ಕರೆದೊಯ್ದು H.D.ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ಮಾಡಿದರು. ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿರುವ ರೇವಣ್ಣರ ಚೆನ್ನಾಂಬಿಕಾ ‌ನಿವಾಸದಲ್ಲಿ ಸ್ಥಳ ಮಹಜರು ಮುಗಿಸಿದ ಎಸ್​ಐಟಿ ಅಧಿಕಾರಿಗಳು, ಪ್ರಜ್ವಲ್‌ನನ್ನು ಬೆಂಗಳೂರಿಗೆ ಕರೆದೊಯ್ದರು.

ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯವು, ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ಜೂನ್ 29ರವರೆಗೂ ಎಸ್​ಐಟಿ ಕಸ್ಟಡಿಗೆ ನೀಡಿದೆ. ಹೀಗಾಗಿ ಪ್ರಜ್ವಲ್​ ರೇವಣ್ಣ ಅವರು ಇನ್ನೂ ಮೂರು ದಿನಗಳ ಕಾಲ ಎಸ್​ಐಡಿ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಲಿದ್ದಾರೆ.

Read More
Next Story