
RCB Champion | ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ; ಸರ್ಕಾರವೇ ನೇರ ಹೊಣೆ- ಎಚ್‌ಡಿಕೆ ಆರೋಪ
ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ಅತೀವ ದುಃಖ ತಂದಿದೆ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತದಲ್ಲಿ ಹತ್ತಕ್ಕೂ ಹೆಚ್ಚು ಆರ್ಸಿಬಿ ಅಭಿಮಾನಿಗಳು ಧಾರುಣವಾಗಿ ಮೃತಪಟ್ಟಿರುವುದು ದಿಗ್ಭ್ರಮೆ ಮೂಡಿಸಿದೆ. ಘಟನೆಗೆ ಸರ್ಕಾರವೇ ನೇರ ಹೊಣೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಘಟನೆಗೆ ದಿಗ್ಬ್ರಮೆ ವ್ಯಕ್ತಪಡಿಸಿರುವ ಅವರು, ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ಅತೀವ ದುಃಖ ತಂದಿದೆ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.
ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವ ಜತೆಗೆ ಮೃತರ ಕುಟುಂಬಗಳ ನೆರವು ನೀಡಲು ಸರ್ಕಾರ ಕೂಡಲೇ ಧಾವಿಸಬೇಕು. ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಕ ಸಂಭವಿಸಿದ ಕಾಲ್ತುಳಿತದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಮೃತಪಟ್ಟು ಹಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೂಕ್ತ ಮುನ್ನಚ್ಚರಿಕೆ ಕ್ರಮ ಕೈಗೊಳ್ಳದ ಸರ್ಕಾರದ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಪ್ರತಿಪಕ್ಷ ಬಿಜೆಪಿ ಕೂಡ ಆರೋಪಿಸಿದೆ.