BSY in Trouble| ಯಡಿಯೂರಪ್ಪ ತನಿಖೆಗೆ ಅನುಮತಿಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ ಸರ್ಕಾರ
x

BSY in Trouble| ಯಡಿಯೂರಪ್ಪ ತನಿಖೆಗೆ ಅನುಮತಿಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ ಸರ್ಕಾರ

ಬಿಡಿಎ ಕಾಮಗಾರಿಗಳ ಗುತ್ತಿಗೆ ಸಂಬಂಧ ಅಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹಾಗೂ ಕುಟುಂಬದ ಸದಸ್ಯರು ಕೋಟ್ಯಂತರ ರೂ.ಕಿಕ್‌ಬ್ಯಾಕ್‌ ಪಡೆದಿದ್ದಾರೆ ಎಂದು ಟಿ.ಜೆ ಅಬ್ರಾಹಂ ಅವರು ದೂರು ನೀಡಿದ್ದರು.


ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಅವರು ಕುಟುಂಬದ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಪೂರ್ವಾನುಮತಿ ನೀಡುವಂತೆ ರಾಜ್ಯಪಾಲರಿಗೆ ಮತ್ತೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಗಂಭೀರವಾದ ೧೬ ಆರೋಪಗಳನ್ನು ಮಾಡಿದ್ದರು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಈ ಹಿಂದೆ ರಾಜ್ಯ ಸರ್ಕಾರ ಕೋರಿತ್ತು. ಆದರೆ, ರಾಜ್ಯಪಾಲರು ಅನುಮತಿ ನಿರಾಕರಿಸಿದ್ದರು. ಈಗ ತನಿಖೆಗೆ ಪೂರ್ವಾನುಮತಿ ನೀಡುವಂತೆ ರಾಜ್ಯಪಾಲರಿಗೆ ಮತ್ತೊಮ್ಮೆ ಶಿಫಾರಸು ಮಾಡಲು ನಿರ್ಧರಿಸಿದೆ.

ಏನಿದು ಪ್ರಕರಣ?

ಎಂ.ಎಸ್ ರಾಮಲಿಂಗಂ ಕನ್‌ಸ್ಟ್ರಕ್ಷನ್‌ ಕಂಪನಿಯ ಅಕ್ರಮ ಬಗ್ಗೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು 2020ರ ನ.19ರಂದು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ (PMLA) ಅಡಿ ಎಸಿಬಿಗೆ ದೂರು ನೀಡಿದ್ದರು. ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಆದರೆ, ರಾಜ್ಯಪಾಲರು ಅನುಮತಿ ನಿರಾಕರಿಸಿದ್ದರು.

ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಮತ್ತು ಕೆಲ ಶೆಲ್ ಕಂಪನಿಗಳಿಗೆ ಬಿಡಿಎ ಕಾಮಗಾರಿಗಳ ಗುತ್ತಿಗೆ ನೀಡಲು ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಹಾಗೂ ಕುಟುಂಬದ ಸದಸ್ಯರು ಕೋಟ್ಯಂತರ ರೂ.ಕಿಕ್‌ಬ್ಯಾಕ್‌ ಪಡೆದಿದ್ದಾರೆ ಎಂದು ಟಿ.ಜೆ ಅಬ್ರಾಹಂ ಅವರು ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಭ್ರಷ್ಟಾಚಾರ ಆರೋಪಗಳ ಕುರಿತು ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲು ನಿರ್ದೇಶಿಸಬೇಕೆಂದು ಕೋರಿದ್ದರು. ರಾಜ್ಯಪಾಲರು ಪ್ರಾಸಿಕ್ಯೂಷನ್‌ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ಕೂಡ 2021ರ ಜುಲೈ 8 ರಂದು ಅಬ್ರಾಹಂ ದೂರನ್ನು ವಜಾಗೊಳಿಸಿತ್ತು.

ದೂರಿನಲ್ಲಿ ಮಾಡಿದ್ದ ಆರೋಪಗಳೇನು?

ಎಂ.ಎಸ್ ರಾಮಲಿಂಗಂ ಕನ್‌ಸ್ಟ್ರಕ್ಷನ್‌ ಕಂಪನಿ ಪ್ರೈವೇಟ್ ಲಿಮಿಟೆಡ್ ಪರವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅಂದಿನ ಸಿಎಂ ಯಡಿಯೂರಪ್ಪ ಅವರು ಕಾರ್ಯಾದೇಶ ಕೊಡಿಸಿದ್ದರು. ಇದಕ್ಕಾಗಿ ಯಡಿಯೂರಪ್ಪ ಪರವಾಗಿ ಐಎಎಸ್ ಅಧಿಕಾರಿ ಜಿ.ಸಿ. ಪ್ರಕಾಶ್ 12 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣವನ್ನು ಪ್ರಕಾಶ್ ಅವರು ವಸೂಲಿ ಮಾಡಿ ಮಗನ ಮೂಲಕ ಯಡಿಯೂರಪ್ಪ ಅವರಿಗೆ ನೀಡಿದ್ದರು ಎಂದು ಆರೋಪಿಸಲಾಗಿತ್ತು.

ಬಿ.ಎಸ್‌. ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿದರ್ ಮರಡಿ ಮತ್ತು ಸಂಜಯ ಸ್ವಾಮೀಜಿ ಶೆಲ್ ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅಬ್ರಾಹಿಂ ದೂರಿನಲ್ಲಿ ತಿಳಿಸಿದ್ದರು.

Read More
Next Story