ರೇಣುಕಾಸ್ವಾಮಿ ಕೊಲೆ ಪ್ರಕರಣ; ಜುಲೈ 10ಕ್ಕೆ ವಿಚಾರಣೆ ಮುಂದೂಡಿಕೆ
x

ನಟ ದರ್ಶನ್‌

ರೇಣುಕಾಸ್ವಾಮಿ ಕೊಲೆ ಪ್ರಕರಣ; ಜುಲೈ 10ಕ್ಕೆ ವಿಚಾರಣೆ ಮುಂದೂಡಿಕೆ

57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜೈಶಂಕರ್‌ ಅವರು ಅರ್ಜಿ ವಿಚಾರಣೆ ನಡೆಸಿದರು. ಕೆಲ ಆರೋಪಿಗಳು ಕೋರ್ಟ್‌ಗೆ ಹಾಜರಾಗಿರದ ಕಾರಣಕ್ಕೆ ವಿಚಾರಣೆಯನ್ನು ಜೂನ್‌ 10 ಕ್ಕೆ ಮುಂದೂಡಲಾಯಿತು.


ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ನಡೆದಿದ್ದು, ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳು ಹಾಜರಾಗಿದ್ದರು.

57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜೈಶಂಕರ್ ಅವರು ಅರ್ಜಿ ವಿಚಾರಣೆ ನಡೆಸಿದರು. ಕೆಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿರದ ಕಾರಣಕ್ಕೆ ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಲಾಯಿತು. ಮಂಗಳವಾರ ನಡೆದ ವಿಚಾರಣೆಗೆ A3 ಆರೋಪಿ ಪವನ್ ಹಾಜರಾಗಿರಲಿಲ್ಲ. ಇದೇ ಸಂದರ್ಭದಲ್ಲಿ, ನ್ಯಾಯಾಲಯವು ಆರೋಪಿ A11 ನಾಗರಾಜು ಅವರಿಗೆ ಹೊಸಪೇಟೆಗೆ ತೆರಳಲು ಅನುಮತಿ ನೀಡಿತು. ಆರೋಪಿಗಳ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಈ ಮುಂದೂಡಿಕೆ ಮಾಡಲಾಗಿದೆ. ಇದಲ್ಲದೆ, ನ್ಯಾಯಾಲಯವು ಪವಿತ್ರಾ ಗೌಡಗೆ 15 ದಿನಗಳ ಕಾಲ ಹೊರರಾಜ್ಯಕ್ಕೆ ತೆರಳಲು ಅವಕಾಶ ನೀಡಿದೆ.

ಪ್ರಕರಣದ ಹಿನ್ನೆಲೆ

ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಅಶ್ಲೀಲ ಪೋಸ್ಟ್‌ಗಳನ್ನು ಹಾಕುತ್ತಿದ್ದನೆಂದು ಆರೋಪಿಸಲಾಗಿತ್ತು. ಈ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಜೂನ್ 8ರ ರಾತ್ರಿ ಬೆಂಗಳೂರಿನ ಪಟ್ಟಣಗೆರೆಯ ಶೆಡ್‌ಗೆ ಕರೆತಂದು ಕೂಡಿ ಹಾಕಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂಬ ಆರೋಪವಿದೆ.

ಜೂನ್ 9ರಂದು ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಟ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಎಲ್ಲಾ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 13ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದರ್ಶನ್ ಕೆಲ ವಾರಗಳ ಕಾಲ ಅಲ್ಲಿಯೇ ಇದ್ದರು. ದರ್ಶನ್ ಹಾಗೂ ಇನ್ನೂ ಕೆಲವರ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಪೊಲೀಸ್ ಇಲಾಖೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್ ಅರ್ಜಿಯ ವಿಚಾರಣೆಗೆ ಈಗಾಗಲೇ ಒಪ್ಪಿಗೆ ನೀಡಿದೆ.

Read More
Next Story