
ಹೈಕೋರ್ಟ್ ಹಾಗೂ ಶಾಸಕ ಹೆಚ್.ಡಿ. ರೇವಣ್ಣ
ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಕ್ಟೋಬರ್ 8ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಸೋಮವಾರ, ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂದಿತ್ತು. ಈ ವೇಳೆ, ರೇವಣ್ಣ ಅವರ ಪರ ವಕೀಲರು ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ ನ್ಯಾಯಪೀಠವು ವಿಚಾರಣೆ ಮುಂದೂಡಲು ಒಪ್ಪಿಗೆ ಸೂಚಿಸಿತು.
ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್, ಅರ್ಜಿದಾರರ ಕೋರಿಕೆಯ ಮೇರೆಗೆ ಅಕ್ಟೋಬರ್ 8ಕ್ಕೆ ಮುಂದೂಡಿದೆ.
ಸೋಮವಾರ, ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂದಿತ್ತು. ಈ ವೇಳೆ, ರೇವಣ್ಣ ಅವರ ಪರ ವಕೀಲರು ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ ನ್ಯಾಯಪೀಠವು ವಿಚಾರಣೆ ಮುಂದೂಡಲು ಒಪ್ಪಿಗೆ ಸೂಚಿಸಿತು.
ಪ್ರಕರಣದ ಹಿನ್ನೆಲೆ
ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ರೇವಣ್ಣ ಮತ್ತು ಅವರ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ 47 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ, ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (SIT) ರಚಿಸಿ, ತನಿಖೆ ನಡೆಸುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಈಗಾಗಲೇ 2,144 ಪುಟಗಳ ಬೃಹತ್ ದೋಷಾರೋಪ ಪಟ್ಟಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ದೋಷಾರೋಪ ಪಟ್ಟಿಯಲ್ಲಿ, ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರೂ ಸಂತ್ರಸ್ತೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಮತ್ತು ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸಬೇಕೆಂದು ಕೋರಿ ಎಚ್.ಡಿ. ರೇವಣ್ಣ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಿರುದ್ಧದ ಆರೋಪಗಳು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506 (ಬೆದರಿಕೆ) ಮತ್ತು 509 (ಮಹಿಳೆಯ ಘನತೆಗೆ ಧಕ್ಕೆ) ಅಡಿಯಲ್ಲಿ ಬರುವುದಿಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.
ಈ ಹಿಂದೆ, ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಚ್.ಡಿ. ರೇವಣ್ಣ ಅವರಿಗೆ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ, ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿಯೂ ಅವರಿಗೆ ಜಾಮೀನು ದೊರೆತಿದ್ದು, ಎಸ್‌ಐಟಿ ಸಲ್ಲಿಸಿದ್ದ ಜಾಮೀನು ರದ್ದತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.