
ತಮಿಳುನಾಡಿನಿಂದ ಹಿಂದಿರುಗುತ್ತಿದ್ದ ವೇಳೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರು ಬಲಿ
ಅತಿವೇಗದಿಂದಾಗಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಟ್ಟೆಗೆ ಡಿಕ್ಕಿ ಹೊಡೆದಿದ್ದು, ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ತಮಿಳುನಾಡಿನ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆಯ ವೇಳೆಗೆ ಇವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಐವರ ಪೈಕಿ ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಕಾರು ಅತಿವೇಗವಾಗಿ ಚಲಿಸುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಟ್ಟೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಶಂಕಿಸಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಸಿರುಗುಪ್ಪ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

