
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಸರ್ಕಾರದ ವಿರುದ್ಧ ಹೋರಾಟ ರೂಪಿಸದ ಬಿಜೆಪಿ; ಆರ್‌ಎಸ್‌ಎಸ್ ಅಸಮಾಧಾನ, ಬಿಜೆಪಿ ನಾಯಕರಿಗೆ ಪಾಠ
ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಸಭೆ, ಪಥಸಂಚಲನ ಮಾಡಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ ಹಿನ್ನೆಲೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಇದನ್ನು ಖಂಡಿಸಿ ಹೋರಾಟ ರೂಪಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಆರ್‌ಎಸ್‌ಎಸ್ ದೂರಿದೆ.
ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಹಾಗೂ ಸರ್ಕಾರದ ನಡುವೆ ಏರ್ಪಟ್ಟಿದ್ದ ಸಂಘರ್ಷವನ್ನು ಸರಿಯಾಗಿ ನಿರ್ವಹಣೆ ಮಾಡುವಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದಾರೆ ಎಂದು ಆರ್‌ಎಸ್‌ಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಆರ್‌ಎಸ್‌ಎಸ್‌ಗೆ ಕಡಿವಾಣ ಹಾಕಲು ಮುಂದಾಗಿ, ಸಾಕಷ್ಟು ತೊಂದರೆ ನೀಡುತ್ತಿದ್ದರೂ ಬಿಜೆಪಿ ನಾಯಕರು ಯಾವುದೇ ಪ್ರಬಲ ಪ್ರತಿರೋಧ ತೋರದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅಡ್ಡಿ ಉಂಟು ಮಾಡುತ್ತಿರುವ ಸರ್ಕಾರ ಹಾಗೂ ಸಮರ್ಥವಾಗಿ ವಿರೋಧಿಸದ ಬಿಜೆಪಿ ನಾಯಕರ ವರ್ತನೆ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಆರ್‌ಎಸ್‌ಎಸ್ ಚಿಂತನ ವರ್ಗದ ಸಭೆ ನಡೆದಿದೆ. ಸಭೆಯಲ್ಲಿ ಆರ್‌ಎಸ್‌ಎಸ್ ಮುಖಂಡರು ಹಾಗೂ ಬಿಜೆಪಿ ನಾಯಕರು ಭಾಗಿಯಾಗಿದ್ದರು.
ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೃಪ್ತಿಕರವಾಗಿಲ್ಲ. ಅಧಿಕೃತ ವಿರೋಧ ಪಕ್ಷವಾಗಿದ್ದರೂ ಆಡಳಿತ ಪಕ್ಷದ ವಿರುದ್ಧ ನಿರೀಕ್ಷಿತ ಮಟ್ಟದಲ್ಲಿ ಹೋರಾಟ ನಡೆಸುವಲ್ಲಿ ಯಶಸ್ವಿಯಾಗಿಲ್ಲ.
ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ನಡೆಯುತ್ತಿವೆ. ನಾಯಕರ ನಡುವೆ ಪೈಪೋಟಿ ತೀವ್ರಗೊಂಡಿದೆ. ಇನ್ನು ಅಭಿವೃದ್ದಿ ಕೆಲಸ ಕಾರ್ಯಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂಬ ಆರೋಪವೂ ಇದೆ. ಹೀಗಿರುವಾಗ ಬಿಜೆಪಿ ಸದನದಲ್ಲಿ ಹಾಗೂ ಹೊರಗೆ ದೊಡ್ಡ ಮಟ್ಟದಲ್ಲಿ ಜನಾಭಿಪ್ರಾಯ ರೂಪಿಸುವ ಕೆಲಸ ಮಾಡಿಲ್ಲ ಎಂಬ ದೂರಿದ್ದಾರೆ. ಅಲ್ಲದೇ ಹೋರಾಟ ರೂಪಿಸಲು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ನಾಯಕರ ವಿರುದ್ಧ ಕಿಡಿ
ರಾಜ್ಯ ಸರ್ಕಾರದಲ್ಲಿ ಸಾಕಷ್ಟು ಲೋಪಗಳು, ಆಡಳಿತ ವೈಫಲ್ಯ ಬೆಳಕಿಗೆ ಬಂದರೂ ಅದನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಲ್ಲಿ ರಾಜ್ಯ ಬಿಜೆಪಿ ವಿಫಲವಾಗಿದೆ ಎಂದು ಆರ್‌ಎಸ್‌ಎಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವ ಕುರಿತು ಬಿಜೆಪಿ ನಾಯಕರಿಗೆ ಸಲಹೆ ಸೂಚನೆ ನೀಡಲಾಗಿದೆ. ಸಭೆಯಲ್ಲಿ ಆರ್‌ಎಸ್‌ಎಸ್ ಮುಖಂಡರಾದ ತಿಪ್ಪೇಸ್ವಾಮಿ, ರಘುನಂದನ್, ವಾದಿರಾಜ್, ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್ ಸಿರೋಯ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಛಲವಾದಿ ನಾರಾಯಣ ಸ್ವಾಮಿ, ಶಾಸಕರಾದ ಅಶ್ವಥ್ ನಾರಾಯಣ, ಬ್ರಿಜೇಶ್ ಚೌಟ, ಜನಾರ್ದನ ರೆಡ್ಡಿ, ಭರತ್ ಶೆಟ್ಟಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.
ಸಿಎಂಗೆ ಸಚಿವ ಪ್ರಿಯಾಂಕ್ ಪತ್ರ
ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಸಭೆ, ಪಥಸಂಚಲನ ಹಾಗೂ ಪ್ರಾರ್ಥನೆ ಸೇರಿದಂತೆ ಯಾವುದೇ ಚಟುವಟಿಕೆ ಮಾಡಬಾರದು ಹಾಗೂ ಸರ್ಕಾರ ಇದ್ದಕ್ಕೆ ಅವಕಾಶ ನೀಡಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು.
ಆರ್‌ಎಸ್‌ಎಸ್, ಬಿಜೆಪಿ ವಿರೋಧ
ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘ ಸಂಸ್ಥೆಗಳ ಚಟುವಟಿಕೆಗೆ ಅವಕಾಶ ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಇದನ್ನು ಖಂಡಿಸಿ ಸಂಘಪರಿವಾರದವರು ಹಾಗೂ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಯಂತ್ರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.
ನೌಕರರು ಭಾಗವಹಿಸದಂತೆ ಎಚ್ಚರ
ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ಸರ್ಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದ ಸಂಗತಿಯೂ ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರೋಧಕ್ಕೆ ಕಾರಣವಾಗಿತ್ತು.
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಭಾಗವಹಿಸದಂತೆ ಸೂಚಿಸಿದ್ದರೂ ಕೆಲ ಅಧಿಕಾರಿ, ನೌಕರರು ಭಾಗವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಆರ್‌ಎಸ್‌ಎಸ್ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆ ಹೊರಡಿಸಿದ್ದರು.

