ಒಳ ಮೀಸಲಾತಿ ಕಾನೂನುಬದ್ಧ | ಸುಪ್ರೀಂಕೋರ್ಟ್ ತೀರ್ಪು ಐತಿಹಾಸಿಕ ಎಂದ ಸಿದ್ದರಾಮಯ್ಯ
ಪರಿಶಿಷ್ಟರಲ್ಲಿ ಅತಿ ಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್ ತೀರ್ಪು ಐತಿಹಾಸಿಕವಾದುದು. ನ್ಯಾಯಾಲಯದ ಈ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ʼಎಕ್ಸ್ʼನಲ್ಲಿ ಪೋಸ್ಟ್ ಮಾಡಿರುವ ಅವರು, ʻʻಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ. ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಬಗೆಗಿನ ಅಂಶವೂ ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದುʼʼ ಎಂದಿದ್ದಾರೆ.
ʻʻಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಹಿಂದೆ ಕಾಂಗ್ರೆಸ್ ಪಕ್ಷದ ಸರ್ಕಾರವೇ ರಚಿಸಿದ್ದ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ನಾವು ಕಳೆದ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ಸರ್ಕಾರ ಬದ್ಧವಾಗಿದೆʼʼ ಎಂದು ತಿಳಿಸಿದ್ದಾರೆ.
"ಈ ನಡುವೆ ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಒಳಮೀಸಲಾತಿ ಬಗ್ಗೆ ಅವಸರದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನುಷ್ಠಾನಗೊಳಿಸಬಹುದು ಎಂದು ಕೇಂದ್ರ ಸರ್ಕಾರವೇ ರಚಿಸಿದ್ದ ಉಷಾ ಮೆಹ್ರಾ ಸಮಿತಿ ಸ್ಪಷ್ಟವಾಗಿ ತಿಳಿಸಿದ್ದರೂ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ತೀರ್ಮಾನ ಕೈಗೊಳ್ಳದೆ ಮೂಲೆಗೆ ಸರಿಸಿತ್ತುʼʼ ಎಂದು ಅವರು ದೂರಿದ್ದಾರೆ.
"ಈಗಿನ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ಶಿಫಾರಸುಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ, ಅಗತ್ಯ ಬಿದ್ದರೆ ಇದಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಪರಿಗಣನೆಗೆ ತೆಗೆದುಕೊಂಡು ಸಮಾಲೋಚನೆ-ಸಂಧಾನದ ಮೂಲಕ ಒಳಮೀಸಲಾತಿ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆʼʼ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೋರ್ಟ್ ಆದೇಶದಲ್ಲಿ ಏನಿದೆ?
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ಎದುರಿಸುತ್ತಿರುವ ವ್ಯವಸ್ಥಿತ ತಾರತಮ್ಯದಿಂದಾಗಿ ಆ ಸಮುದಾಯಗಳು ಸಮಾಜದಲ್ಲಿ ಮೇಲಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಸಂವಿಧಾನದ 14ನೇ ವಿಧಿ ಜಾತಿಯ ಉಪ-ವರ್ಗೀಕರಣವನ್ನು ಅನುಮತಿಸುತ್ತದೆ. ಮೀಸಲಾತಿ ಪಟ್ಟಿಗೆ ಸಮುದಾಯಗಳ ಸೇರ್ಪಡೆ ಅಥವಾ ತೆಗೆಯಲು ತುಷ್ಟೀಕರಣ ರಾಜಕೀಯ ಮಾಡಬಾರದು.
ಪರಿಶಿಷ್ಟ ಜಾತಿಗಳು ಏಕರೂಪದ ಗುಂಪಲ್ಲ. ಪರಿಶಿಷ್ಟ ಜಾತಿಗಳಲ್ಲಿ ಹೆಚ್ಚು ತಾರತಮ್ಯವನ್ನು ಅನುಭವಿಸಿದವರಿಗೆ 15% ಮೀಸಲಾತಿಯಲ್ಲಿ ಹೆಚ್ಚಿನ ಅವಕಾಶ ನೀಡಲು ಸರ್ಕಾರಗಳು ಅವರನ್ನು ಉಪ ವರ್ಗೀಕರಿಸಬಹುದು.
ಪರಿಶಿಷ್ಟ ಜಾತಿಗಳಲ್ಲಿ ಜಾತಿಗಳ ಉಪ-ವರ್ಗೀಕರಣವು ಅವರ ತಾರತಮ್ಯದ ಮಟ್ಟವನ್ನು ಆಧರಿಸಿರಬೇಕು. ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಅವರ ಪ್ರಾತಿನಿಧ್ಯದ ಕುರಿತು ಪ್ರಾಯೋಗಿಕ ಡೇಟಾವನ್ನು ಸಂಗ್ರಹಿಸುವ ಮೂಲಕ ರಾಜ್ಯಗಳು ಉಪ ವರ್ಗೀಕರಣವನ್ನು ಮಾಡಬಹುದು.