
ಉತ್ತರ ಕನ್ನಡದಲ್ಲಿ ಮಕ್ಕಳ ಶಾಲಾ ಬಸ್ ಪಲ್ಟಿ; ಮೈಸೂರಿನ ವಿದ್ಯಾರ್ಥಿ ಸಾವು, 26 ಮಂದಿಗೆ ಗಾಯ
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಹೊನ್ನಾವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಶಾಲಾ ಪ್ರವಾಸಕ್ಕೆಂದು ತೆರಳಿದ್ದ ಮೈಸೂರು ಮೂಲದ ಶಾಲಾ ಬಸ್ ಪಲ್ಟಿಯಾಗಿ, ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ನಡೆದಿದೆ.
ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಗೆ ಸೇರಿದ ಶಾಲಾ ಮಕ್ಕಳು ಬಸ್ಸಿನಲ್ಲಿ ಪ್ರವಾಸಕ್ಕೆಂದು ಗೋಕರ್ಣಕ್ಕೆ ತೆರಳುತ್ತಿದ್ದರು. ಈ ವೇಳೆ ಹೊನ್ನಾವರ ಸಮೀಪದ ಸುಳೆ ಮುರ್ಕಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಈ ದುರಂತದಲ್ಲಿ ಪ್ರವಾಸದ ಸಂಭ್ರಮದಲ್ಲಿದ್ದ ಮಕ್ಕಳು ತೀವ್ರ ಆಘಾತಕ್ಕೊಳಗಾಗಿದ್ದಾರೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು
ಅಪಘಾತದ ತೀವ್ರತೆಗೆ ಮೈಸೂರು ಮೂಲದ ಪವನ್ (15) ಎಂಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತ ತರಳಬಾಳು ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ಎಂದು ಗುರುತಿಸಲಾಗಿದೆ. ಬಸ್ ಪಲ್ಟಿಯಾದ ರಭಸಕ್ಕೆ ವಿದ್ಯಾರ್ಥಿಗಳಿಗೆ ಬಲವಾದ ಪೆಟ್ಟು ಬಿದ್ದಿದ್ದು, ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯಲ್ಲಿ ಒಟ್ಟು 26 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದಾರೆ. ಗಂಭೀರ ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಹೊನ್ನಾವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

